ಮಂಗಳೂರು: ಇಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪ್ರವೇಶ ಪಡೆಯಲು ಉದ್ಯಮಿ ಬಿ.ಆರ್.ಶೆಟ್ಟಿ ಹರಸಾಹಸಪಟ್ಟ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸರ್ಕಾರದ ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಶುಕ್ರವಾರ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ರಾಜ್ಯಪಾಲ ಠಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಜಿಲ್ಲೆಯ ಶಾಸಕರು, ಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಈ ಕಾರ್ಯಕ್ರಮಕ್ಕೆ ಎಂಟ್ರಿಯಾಗಲು ಉದ್ಯಮಿ ಬಿ.ಆರ್.ಶೆಟ್ಟಿ ಹರಸಾಹಸ ಪಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರ್ಯಕ್ರಮದ ಕೆಲವೇ ನಿಮಿಷ ಮೊದಲು ವಿಐಪಿ ಗ್ಯಾಲರಿ ಎಂಟ್ರಿಯಾಗಲು ಬಿ.ಆರ್.ಶೆಟ್ಟಿ ಬಂದಿದ್ದರು. ಆದರೆ ಪಾಸ್ ಇಲ್ಲದ ಕಾರಣ ಪೊಲೀಸರು ಅವರಿಗೆ ಒಳಗೆ ಹೋಗಲು ಅವಕಾಶ ನೀಡಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಕೆಲವರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ನಮ್ಮನ್ನ ಬಿಡದಿದ್ದರೂ ಪರವಾಗಿಲ್ಲ, ಅವರನ್ನು ಒಳಗೆ ಬಿಡಿ. ಪ್ರಧಾನಿ ಮೋದಿಯನ್ನ ದುಬೈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಬಿ.ಆರ್.ಶೆಟ್ಟಿಗೆ ಒಳಗೆ ಬಿಡದಿದ್ರೆ ಹೇಗೆ?’ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲ ಹೊತ್ತಿನ ಬಳಿಕ ಬಿ.ಆರ್.ಶೆಟ್ಟಿ ಅವರ ಎಂಟ್ರಿಗೆ ಪೊಲೀಸರು ಅವಕಾಶ ಕೊಟ್ಟಿದ್ದಾರೆ. ಸದ್ಯ ಆರ್ಥಿಕ ಕುಸಿತಕ್ಕೆ ಒಳಗಾಗಿ ಸಾಲದ ಹೊರೆಯಲ್ಲಿರುವ ಬಿ.ಆರ್.ಶೆಟ್ಟಿ ವರ್ಷಗಳ ಹಿಂದೆ ಪ್ರಧಾನಿ ಮೋದಿ ದುಬೈ ಕಾರ್ಯಕ್ರಮ ಆಯೋಜಿಸಿದ್ದರು.