ಹೊನ್ನಾವರ: ಶಿಕ್ಷಣ ನೀಡಿದ ಗುರುಗಳನ್ನು ಗೌರವಿಸುವ ಗುಣವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಸೋಮವಾರ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ, ಸಂಸ್ಕಾರ ನೀಡುವ ಶಿಕ್ಷಕರು ನಮಗೆಲ್ಲರಿಗೂ ಒಂದು ಶಕ್ತಿ. ಶಿಕ್ಷಕರು ಉತ್ತಮ ಸಮಾಜದ ನಿರ್ಮಾತೃಗಳಾಗಿದ್ದಾರೆ ಎಂದರು.
ಸಿಪಿಐ ಶ್ರೀಧರ್ ಎಸ್.ಆರ್. ಮಾತನಾಡಿ, ಓರ್ವ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಕಾರದಂತಹ ಗುಣವನ್ನು ಧಾರೆ ಎರೆದು ಸದೃಢ ಸಮಾಜದ ಮುಂದೆ ಜೀವನ ನಡೆಸಲು ಅಣೆಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು.
ಅಂಕೋಲಾ ಜೆ.ಸಿ.ಕಾಲೇಜಿನ ಡಾ.ಎಸ್.ವಿ.ವಸ್ತ್ರದ್ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಿಕ್ಷಕರನ್ನು ಹಾಗೂ ವಿಶೇಷ ಸಾಧನೆ ಮಾಡಿದ 10 ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಹುಮುಖ ಪ್ರತಿಭೆಯ ಶಿಕ್ಷಕರಾದ ಯಶವಂತ ಮೇಸ್ತ, ಶಾರದಾ ಹೆಗಡೆ, ಕಲ್ಪನಾ ಶೇಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಶಿಕ್ಷಕರಿಗೆ ಆಯೋಜಿಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಶಿಕ್ಷಕ ಸುಧೀಶ ನಾಯ್ಕ ನಿರೂಪಿಸಿದರು. ಕೃಷ್ಣಮೂರ್ತಿ ಭಟ್ಟ ಶಿವಾನಿ ಅವರು ಸನ್ಮಾನದ ನೇತೃತ್ವ ವಹಿಸಿದ್ದರು. ವೇದಿಕೆಯಲ್ಲಿ ತಹಶೀಲ್ದಾರ್ ನಾಗರಾಜ್ ನಾಯ್ಕಡ್, ತಾ.ಪಂ ಇಒ ಸುರೇಶ ನಾಯ್ಕ, ಸಾಲ್ಕೋಡ್ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ನಾಯ್ಕ, ನೌಕರರ ಸಂಘದ ತಾಲೂಕಾಧ್ಯಕ್ಷ ಆರ್.ಟಿ.ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ, ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಸಿವರ್ಗಿಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಹೇಶ ಶೆಟ್ಟಿ, ಕೃಷ್ಣ ಗೌಡ, ಶಿಕ್ಷಕರ ಸಂಘದ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.