ಕಾರವಾರ: ಚಾಲಕರು ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ತಕ್ಷಣ ರಚಿಸುವಂತೆ ಆಗ್ರಹಿಸಿ ರಾಜ್ಯ ಅಸಂಘಟಿತ ಕಾರ್ಮಿಕ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದ ಚಾಲಕರು, ನಿರ್ವಾಹಕರು, ಮೆಕ್ಯಾನಿಕ್‌ಗಳು, ಕ್ಲೀನರ್ ಗಳು ಸೇರಿದಂತೆ ಅಸಂಘಟಿತ ಕಾರ್ಮಿಕರು ಭದ್ರತಾ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಕೇಶವಮೂರ್ತಿ, ಚಾಲಕರು, ನಿರ್ವಾಹಕರು ಮೆಕ್ಯಾನಿಕ್‌ಗಳು, ಕ್ಲೀನರ್‌ಗಳು, ರಸ್ತೆ ಬದಿ ಟೈರ್ ಪಂಚರ್ ಹಾಕುವವರು,ಟಿಂಕರಿಂಗ್ ಕೆಲಸ ಮಾಡುವ ಕಾರ್ಮಿಕರನ್ನು ಒಳಗೊಂಡತೆ ಅಸಂಘಟಿತ ಕಾರ್ಮಿಕರಿಗೆ ಸಮಾಜಿಕ ಭದ್ರತಾ ಮಂಡಳಿಯನ್ನು ರಚಿಸುವಂತೆ ಹಲವಾರು ಬಾರಿ ಕಾರ್ಮಿಕ ಸಚಿವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಗಿದೆ. ಕಾರ್ಮಿಕ ಸಚಿವರಾದಂತಹ ಶಿವರಾಮ ಹೆಬ್ಬಾರರು ಸಕಾರಾತ್ಮಕವಾಗಿ ಸ್ಪಂದಿಸಿ, ಈ ಮಂಡಳಿಯನ್ನು ಅನುಷ್ಠಾನಗೊಳಿಸಿದಲ್ಲಿ ರಾಜ್ಯದ 25 ಲಕ್ಷಕ್ಕೂ ಹೆಚ್ಚು ಜನ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಮಿಕ ಮಂತ್ರಿಗಳು ಈ ಮಂಡಳಿಯನ್ನು ಅನುಷ್ಠಾನಗೊಳಿಸಲು ಮುಖ್ಯಮುಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ನೀಡಿದ್ದರು. ಆದರೆ ಅದು ಭರವಸೆಯಾಗಿಯೇ ಉಳಿದಿದೆ. ಹೀಗಾಗಿ ಇಂದು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತಿದ್ದು, ಮುಖ್ಯಮಂತ್ರಿಗಳು ಈ ವಿಷಯದ ಬಗ್ಗೆ ಗಮನ ಹರಿಸಿ ಕಾರ್ಮಿಕ ಮಂತ್ರಿಗಳಿಗೆ ಸಂಪುಟದ ಮುಂದೆ ಚಾಲಕರು ಮತ್ತು ಇತರೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ರಚನೆ ಕುರಿತು ಬಿಲ್ ಅನ್ನು ಮಂಡಿಸಲು ಸೂಚಿಸಬೇಕಾಗಿ ಜಿಲ್ಲಾಧ್ಯಕ್ಷೆ ಸಲ್ಮಾ ಶೇರ್ ಖಾನೆ ಒತ್ತಾಯಿಸಿದ್ದಾರೆ.