
ಕುಮಟಾ: ಪಟ್ಟಣದ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಶಾಸಕ ದಿನಕರ ಶೆಟ್ಟಿ, ಅಲ್ಲಿನ ಅವ್ಯವಸ್ಥೆಯ ಕುರಿತು ನಿಲ್ದಾಣಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು, ಸ್ವಚ್ಛತೆಯ ಕುರಿತು ಖಡಕ್ ಪಾಠ ಹೇಳಿದ ಘಟನೆ ನಡೆದಿದೆ.
ರೈಲು ನಿಲ್ದಾಣದಲ್ಲಿ ಸ್ವಚ್ಛತೆ ಮಾಯವಾಗಿ ಅವ್ಯವಸ್ಥೆಯ ಆಗರವಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ತಕ್ಷಣ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ದಿನಕರ ಶೆಟ್ಟಿ, ನಿಲ್ದಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಅಲ್ಲದೇ, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೂ ಕುಮಟಾದ ರೇಲ್ವೇ ನಿಲ್ದಾಣದ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶಗೊಂಡರು.
ಪ್ರತಿನಿತ್ಯ ಸಾವಿರಾರು ಸಾರ್ವಜನಿಕರು ಆಗಮಿಸುವ ಕುಮಟಾ ತಾಲೂಕಾ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ನೋಡಿಕೊಂಡು ಬನ್ನಿ. ಸ್ವಚ್ಛತೆಗೆ ನಿಮಗೆ ಸಾಕಷ್ಟು ಅನುದಾನ ಬಂದರೂ ಅದರ ಕುರಿತು ಗಮನಹರಿಸುತ್ತಿಲ್ಲ ಎಂದು ಕಿಡಿ ಕಾರಿದ ಅವರು, ನಿಲ್ದಾಣದ ಆವರಣದ ಸುತ್ತ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವುದು ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಹಿಂದೆ ಕುಮಟಾ ರೇಲ್ವೆ ನಿಲ್ದಾಣವು ಸ್ವಚ್ಛತೆಗಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದು ಸುದ್ದಿಯಾಗಿತ್ತು. ಆದರೆ ಈಗ ಗಬ್ಬು ನಾರುತ್ತಿರುವ ಬಗ್ಗೆ ಸುದ್ದಿಯಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಕಾರ್ಯಕ್ಷಮತೆಯೇ ಕಾರಣ. ಸ್ವಚ್ಛತೆಯ ಕುರಿತು ಈಗಿನ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಬೇಸರದ ಸಂಗತಿ. ಇದರ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿದ್ದರು.