ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬೀಚ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ಸಹಯೋಗದಲ್ಲಿ ಹೊನ್ನಾವರದ ಕಾಸರಕೋಡ್ ಇಕೋ ಬೀಚ್‌ನಲ್ಲಿ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಯನ್ನ ಅ.28ರಿಂದ 30ರವರೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಪಂದ್ಯಾವಳಿಯ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಇಕೋ ಬೀಚ್ ಸತತ ಮೂರನೇ ಬಾರಿಗೆ ಬ್ಲ್ಯೂ ಫ್ಲ್ಯಾಗ್ ಮಾನ್ಯತೆ ಪಡೆದುಕೊಂಡಿರುವುದು ಸಂಭ್ರಮ ಹೆಚ್ಚಿಸುವ ಜತೆಗೆ ಹೆಮ್ಮೆಯ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಈ ರಾಷ್ಟ್ರ ಮಟ್ಟದ ಬೀಚ್ ವಾಲಿಬಾಲ್ ಪಂದ್ಯಾವಳಿಯನ್ನು ಅಲ್ಲಿ ಆಯೋಜಿಸಲಾಗುತ್ತಿದೆ ಎಂದರು.
ಪಂದ್ಯಾವಳಿಯಲ್ಲಿ ಕೇರಳ, ತಮಿಳುನಾಡು, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧೆಡೆಯಿಂದ 20ಕ್ಕೂ ಹೆಚ್ಚು ಪುರುಷ ಹಾಗೂ ಮಹಿಳಾ ತಂಡಗಳು ಭಾಗವಹಿಸಲಿವೆ. ಪಂದ್ಯಾವಳಿಯಲ್ಲಿ ಪ್ರಥಮ 25 ಸಾವಿರ, ದ್ವಿತೀಯ 20, ತೃತೀಯ 15 ಹಗೂ ಚತುರ್ಥ 10 ಸಾವಿರ ನಗದು ಬಹುಮಾನ ಇಡಲಾಗಿದೆ. ಕ್ರೀಡಾಪಟುಗಳು ಮತ್ತು ನಿರ್ಣಾಯಕರೊಗೆ ಪ್ರಯಾಣ ಭತ್ಯೆ, ಊಟೋಪಚಾರ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ಪ್ರತಿವರ್ಷ ವಾರ್ಷಿಕ ಕ್ಯಾಲೆಂಡರ್‌ನಲ್ಲಿ ಈ ಪಂದ್ಯಾವಳಿಯನ್ನು ನಮೂದಾಗುವಂತೆ ಮಾಡಿ ಕ್ರೀಡೆ ಮತ್ತು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಶಕ್ತಿ ನೀಡುವ ಕಾರ್ಯ ಮಾಡಲಾಗುತ್ತದೆ ಎಂದರು. ಎಲ್ಲಾ ಸಂಘ- ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕು. ಈ ಹೊಸ ಥರದ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಅವರು ಕೋರಿದರು.