ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಹಾಗೂ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.
ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರದಾನ ಮಾಡುವ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಗೆ ರಾಜ್ಯ ಸರ್ಕಾರವೇ ಆಹ್ವಾನಿಸುತ್ತಿದೆ. ಕನ್ನಡ ಚಿತ್ರರಂಗದ ದಿಗ್ಗಜರ ಜೊತೆಗೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂ.ಎನ್ ಟಿಆರ್ ಗೂ, ಅಮಿತಾಭ್ ಬಚ್ಚನ್, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ಐಶ್ವರ್ಯಾ ರೈ ಬಚ್ಚನ್ ಅವರಿಗೂ ವಿಶೇಷ ಆಹ್ವಾನ ನೀಡಲಾಗಿದೆ.
ಡಾ.ರಾಜ್ ಕುಮಾರ್ ಅವರಿಗೂ ಸಹ ಕರ್ನಾಟಕ ರತ್ನ ನೀಡಲಾಗಿತ್ತು. ಈಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದ್ದು, ಕನ್ನಡ ಸಿನಿಮಾ ರಂಗದ ಸೇವೆಗಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ತಂದೆ-ಮಗ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಈವರೆಗೆ ಎಂಟು ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. 2009ರ ನಂತರ ಈಗ ಮೊದಲ ಬಾರಿಗೆ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.