ಮುಂಡಗೋಡ: ಮಾಜಿ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರುವ ದಿನಾಂಕ ನಿಗದಿಯಾಗಿದೆ. ನವೆಂಬರ್ 4 ರಂದು ಬೆಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಪಾಟೀಲ್ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿ ತೊರೆದು ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರುತ್ತಾರೆನ್ನುವ ಸುದ್ದಿ ಕ್ಷೇತ್ರದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ಬಗ್ಗೆ ವಿ.ಎಸ್. ಪಾಟೀಲ್ ಸಹ ಕಾಂಗ್ರೆಸ್ ಸೇರುವ ಇಚ್ಚೆಯನ್ನ ಸಹ ವ್ಯಕ್ತಪಡಿಸಿದ್ದರು. ಆದರೆ ಕೆಲ ದಿನಗಳಿಂದ ಸೇರ್ಪಡೆಯಾಗದಿರುವುದು ಕ್ಷೇತ್ರದಲ್ಲಿ ಸಾಕಷ್ಟು ಅನುಮಾನ ಮೂಡಿಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನ ಮಾಜಿ ಶಾಸಕ ಮಧು ಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಐವಾನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕರ ಸಮ್ಮುಖದಲ್ಲಿ ಪಾಟೀಲ್ ಭೇಟಿ ಮಾಡಿ ಪಕ್ಷ ಸೇರ್ಪಡೆ ಕುರಿತು ಚರ್ಚಿಸಿದ್ದು ಕೋರ್ ಕಮಿಟಿ ಸಭೆಯಲ್ಲಿಯಲ್ಲಿಯೇ ಈ ಬಗ್ಗೆ ಚರ್ಚೆ ನಡೆಸಿ ಅಂದೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ವಿ.ಎಸ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಸೇರುವ ನಿಟ್ಟಿನಲ್ಲಿಯೇ ನಾನು ಈ ಹಿಂದೆ ಬಹಿರಂಗವಾಗಿ ಹೇಳಿಕೊಂಡಿದ್ದೆ. ಭಾರತ್ ಜೋಡೋ ಯಾತ್ರೆ ಹಿನ್ನಲೆಯಲ್ಲಿ ಸೇರ್ಪಡೆ ತಡವಾಗಿತ್ತು. ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ದೇಶಪಾಂಡೆ, ಎಂಬಿ ಪಾಟೀಲ್ ಸೇರಿದಂತೆ ಹಲವು ಮುಖಂಡರನ್ನ ಸೋಮವಾರ ಭೇಟಿ ಮಾಡಿ ಪಕ್ಷ ಸೇರ್ಪಡೆಯ ಬಗ್ಗೆ ಅನುಮತಿ ಪಡೆದಿದ್ದೇನೆ. ಹಾಗೇ ಮಂಗಳವಾರ ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದು ನವೆಂಬರ್ 4 ರಂದು ಸೇರ್ಪಡೆಯಾಗಲಿದ್ದೇನೆ. ಇದಾದ ನಂತರ ಮುಂಡಗೋಡಿನಲ್ಲಿ ಬೃಹತ್ ಸಮಾವೇಶ ನಡೆಸಿ ಬೆಂಬಲಿಗರ ಜೊತೆ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದಿದ್ದಾರೆ.