ಕಾರವಾರ: 67ನೇ ಕನ್ನಡ ರಾಜ್ಯೋತ್ಸವವನ್ನು ನಗರದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯೋತ್ಸವದ ಶುಭ ಸಂದೇಶ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಿಸಬೇಕೆಂಬುದು ಆ ಸಮುದಾಯಗಳ ಬಹುವರ್ಷಗಳ ಬೇಡಿಕೆ. ಇದರ ಅಗತ್ಯತೆಯನ್ನು ಅರಿತ ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿದೆ. ರಾಜ್ಯಾದ್ಯಂತ 830 ವಸತಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ವರ್ಷ ಹೊಸದಾಗಿ ನಾಲ್ಕು ಶ್ರೀನಾರಾಯಣಗುರು ವಸತಿ ಶಾಲೆಗಳನ್ನು ಆರಂಭಿಸಲಾಗಿದೆ. ಅದರಲ್ಲಿ ಜಿಲ್ಲೆಯಲ್ಲೂ ಒಂದು ಶಾಲೆ ಆರಂಭವಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಏಳೂವರೆ ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ನಮ್ಮ ವಸತಿ ಶಾಲೆಗಳ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೇ 99.10ರಷ್ಟಿರುವುದು ಹೆಮ್ಮೆಯ ಸಂಗತಿ ಎಂದರು.
ಜಿಲ್ಲೆಯ ವಿವಿಧೆಡೆ ಗೋಶಾಲೆಗಳನ್ನು ತೆರೆಯಲಾಗುತ್ತಿದೆ. ಹಳಿಯಾಳ, ಭಟ್ಕಳ, ಕಾರವಾರ, ಶಿರಸಿ ತಾಲೂಕುಗಳ ಗೋಶಾಲೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುತ್ತಿವೆ. ಸದ್ಯದಲ್ಲೇ ಇವುಗಳಿಗೆ ಚಾಲನೆ ನೀಡಲಾಗುವುದು ಎಂದರು.
ಪೊಲೀಸ್, ಎನ್‌ಸಿಸಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್, ಸೇವಾದಳ, ಅರಣ್ಯ, ಗೃಹರಕ್ಷಕ ದಳ ಸೇರಿದಂತೆ ಒಟ್ಟು 13 ತಂಡಗಳು ಪೊಲೀಸ್ ಪರೇಡ್ ಮೈದಾನದಲ್ಲಿ ಸುಂದರ ಕವಾಯತು ಪ್ರದರ್ಶಿಸಿದವು. ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿ ಹಿರಿಮೆ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ವೇದಿಕೆಯಲ್ಲಿ 16 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.