ಅಂಕೋಲಾ: ಹೊಸದಾಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪ್ರಭುಲಿಂಗ ಕವಳಿಕಟ್ಟಿ ಅವರು ತಾಲೂಕಿನ ರಾಮನಗುಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವೈದ್ಯರಾಗಲಿ, ಅರೆವೈದ್ಯಕೀಯ ಸಿಬ್ಬಂದಿಯಾಗಲಿ ಇರದಿದ್ದನ್ನ ಕಂಡು ತಾಲೂಕು ಆರೋಗ್ಯಾಧಿಕಾರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ.
ಕರ್ತವ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಈ ಪಿಎಚ್‌ಸಿಗೆ ಭೇಟಿ ನೀಡಿದ್ದರು. ಅಂಕೋಲಾ- ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಪಕ್ಕ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರ ಇದಾಗಿದ್ದು, ಸಿಬ್ಬಂದಿ ಸರಿಯಾದ ಸಮಯಕ್ಕೆ ಹಾಜರಾಗದೇ ಇರುವುದಕ್ಕೆ ತಕ್ಷಣವೇ ಡಿಸಿ ಜಿಲ್ಲಾ ಆರೋಗ್ಯಾಧಿಕಾರಿ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದಾಗ ಬೆಂಗಳೂರಿನಲ್ಲಿ ತರಬೇತಿಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಭೇಟಿ ನೀಡಿದ ಸಂದರ್ಭದಲ್ಲಿ ಅಂಬ್ಯುಲೆನ್ಸ್ ಚಾಲಕ, ಜವಾನ ಮಾತ್ರ ಇದ್ದು, ಯಾವುದೇ ವೈದ್ಯಕೀಯ ಸಿಬ್ಬಂದಿ ಆ ಸಮಯದಲ್ಲಿ ಇರಲಿಲ್ಲ ಎಂಬುದು ತಿಳಿದುಬಂದಿದೆ. ಹೀಗಾಗಿ ತಾಲೂಕು ಆರೋಗ್ಯಾಧಿಕಾರಿಗೆ ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ.