ಭಟ್ಕಳ: ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತನಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ.10ರಂದು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕು ಅಧ್ಯಕ್ಷ ಶಂಕರ ನಾಯ್ಕ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತನಲ್ಲಿ ನಡೆದಿರುವ ಅವ್ಯವಹಾರ ಭ್ರಷ್ಟಾಚಾರದ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಅವರು ಸಾಕ್ಷಿ ಸಮೇತ ದೂರು ಸಲ್ಲಿಸಿದ್ದಾರೆ. ತನಿಖೆಯಲ್ಲಿ ಅವ್ಯವಹಾರ, ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಆದರೆ ಜಿಲ್ಲಾ ಪಂಚಾಯತ್ ಸಿಇಓ ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಈವರೆಗೂ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನ.10ರಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಸಂಘಟನೆಯ ಅಧ್ಯಕ್ಷ ರಮೇಶ ಕುಣಿಗಲ್ ಅವರ ನೇತ್ರತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನಾಗೇಶ ನಾಯ್ಕ ಮಾತನಾಡಿ, ಹೆಬ್ಳೆ ಗ್ರಾಮ ಪಂಚಾಯತಲ್ಲಿ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಇಲ್ಲಿ ಅಧಿಕಾರಿಗಳಿಗೆ ಶಿಕ್ಷೆಯಾದರೆ ಸಾಲದು, ಇದಕ್ಕೆ ಪ್ರಮುಖ ಕಾರಣರಾದ ಅಧ್ಯಕ್ಷ ಮತ್ತು ಸದಸ್ಯರ ಮೇಲೂ ಕ್ರಮ ಕೈಗೊಳ್ಳಬೇಕು. ಪಂಚಾಯತ್ ವ್ಯವಸ್ಥೆಯಲ್ಲಿ ಮಾತ್ರ ಅಧ್ಯಕ್ಷರಿಗೆ ಚೆಕ್‌ಗಳಿಗೆ ಸಹಿ ಹಾಕುವ ಅಧಿಕಾರ ನೀಡಲಾಗಿದೆ. ಇಂತಹ ಅಧಿಕಾರವನ್ನು ಇವರು ದುರುಪಯೋಗ ಪಡಿಸಿಕೊಂಡಿದ್ದಾರೆ. ಇಂಥವರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರ್ಜುನ್ ಮಲ್ಯ, ಸಹ ಕಾರ್ಯದರ್ಶಿ ವಸಂತ ದೇವಾಡಿಗ ಮುಂತಾದವರು ಇದ್ದರು.