ಬೆಂಗಳೂರು: ನ.11ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲೋಕಾರ್ಪಣೆ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು ಎಂದು ವಿವರಿಸಿದರು.
ಮೊದಲ ಹಂತದಲ್ಲಿ ಮೈಸೂರು ಬೆಂಗಳೂರು-ಚೆನ್ನೈ ಅತಿ ವೇಗದ ರೈಲು ಸಂಚಾರ ಆರಂಭವಾಗಲಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ 100 ಕೌಟರ್ ಗಳು, ಅತ್ಯಾಧುನಿಕ ತಂತ್ರಜ್ಞಾನ ಬಳಸಿದ ಸೃಜಿಸಿದ ಸೌಲಭ್ಯ, ಪ್ರತಿದಿನ 25 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.ಎರಡೂ ಟರ್ಮಿನಲ್ ಸೇರಿದರೆ ದೆಹಲಿ ನಂತರ ಅತಿದೊಡ್ಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ.
ವಿಶ್ವದ ಮಾದರಿ ನಗರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವ, ನಿರ್ಧಾರಗಳು ಭದ್ರ ಬುನಾದಿ ಹಾಕಿದ್ದು, ಅಂತಹ ಮಹಾನ್ ವ್ಯಕ್ತಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ಜತೆಗೆ ಥೀಮ್ ಪಾರ್ಕ್ ನಿರ್ಮಾಣವಾಗಿದ್ದು, ಅನಾವರಣದ ನಂತರ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.