ಶಿರಸಿ: ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಆರೋಗ್ಯ ತಪಾಸಣಾ ಶಿಬಿರ ಕೈಗೊಂಡಿದ್ದು, ಪ್ರತಿಯೊಬ್ಬರೂ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೇವರಾಜ್ ಹಿತ್ತಲಕೊಪ್ಪ ಹೇಳಿದರು.
ನಗರದ ಭಾರತ ಸ್ಕೌಟ್ಸ್ ಗೈಡ್ಸ್ ಕಾರ್ಯಾಲಯ ರಾಯಪ್ಪ ಹುಲೇಕಲ್ ಶಾಲೆಯ ಸಭಾಭವನದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿದಿನ ಒತ್ತಡಗಳ ಮಧ್ಯೆ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಆರೋಗ್ಯದತ್ತ ಗಮನ ಹರಿಸುವುದಿಲ್ಲ. ಇದರಿಂದ ಹಲವು ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇದನ್ನರಿತ ಇಲಾಖೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಂಡಿದ್ದಾರೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ ಮಾತನಾಡಿ, ಕೇವಲ ಕೆಲಸದ ಬಗ್ಗೆ ವಿಚಾರ ಮಾಡುತ್ತ ಒತ್ತಡದಲ್ಲಿ ಆರೋಗ್ಯದ ನಿರ್ಲಕ್ಷ್ಯ ಮಾಡದೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸುವುದು ಅತೀ ಅವಶ್ಯಕವಾಗಿದೆ. ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲೇ ಬಿಪಿ, ಶುಗರ್, ಅಸ್ತಮಾ, ಹೃದಯಾಘಾತದಂತಹ ಕಾಯಿಲೆಗಳಿಗೆ ಜನರು ತುತ್ತಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ನೀರು, ಆಹಾರ ಪದ್ಧತಿಯ ಕುರಿತು ಹೆಚ್ಚು ಜಾಗೃತರಾಗಿರಬೇಕಿದೆ ಎಂದರು. ಇನ್ನು ಆರೋಗ್ಯ ಇಲಾಖೆಯಡಿ ಯಾವುದೇ ತೊಂದರೆಯಾಗದಂತೆ ಉಚಿತ ಪುರುಷ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನೀಡುತ್ತಿದ್ದು, ಇದರ ಉಪಯೋಗವನ್ನು ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಹಿರಿಯ ತಜ್ಞ ಡಾ.ಪ್ರಕಾಶ್ ಪುರಾಣಿಕ, ಡಿಎಚ್‌ಇಒ ಬಸವರಾಜ್ ಎಸ್., ತಾಲೂಕಿನ ಎಲ್ಲಾ ತಜ್ಞ ವೈದ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಹಾಗೂ ಗ್ರಾಮ ಪಂಚಾಯತ್ ನೌಕರರು ಮತ್ತು ಸಿಬ್ಬಂದಿಗಳು ಹಾಜರಿದ್ದರು.