ಕುಮಟಾ: ತಾಲೂಕಿನ ಮೂರೂರಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮತದಾನದ ಕುರಿತು ಜಾಗೃತಿ ಜಾಥಾ ನಡೆಯಿತು.
ಬಾವುಟ ಪ್ರದರ್ಶಿಸುವ ಮೂಲಕ ಜಾಗೃತಿ ಜಾಥಕ್ಕೆ ಚಾಲನೆ ನೀಡಿದ ವಿದ್ಯಾನಿಕೇತನ ಸಂಸ್ಥೆಯ ಸದಸ್ಯರಾದ ಜಿ.ವಿ.ಹೆಗಡೆ ಮಾತನಾಡಿ, ಮತದಾನ ಇಂದು ಪ್ರತಿಯೊಬ್ಬ ಪ್ರಜೆಯ ಹಕ್ಕಾಗಿದೆ. ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಈ ಮಹತ್ವದ ಕಾರ್ಯದಲ್ಲಿ ಪಾಲ್ಗೊಳ್ಳಲೇಬೇಕು. ಪ್ರಜ್ಞಾವಂತರಾದ ನಾವು ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆಯನ್ನು ಅರಿತು ಪ್ರತಿಯೊಬ್ಬರೂ ಮತದಾನ ಮಾಡಬೇಕು. ಯಾವುದೇ ಆಮಿಷಕ್ಕೆ ಒಳಗಾಗದೆ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಆ ಮೂಲಕ ಉತ್ತಮ ನಾಯಕನನ್ನು ಆಯ್ಕೆ ಮಾಡಿ ದೇಶದ ಅಭಿವೃದ್ಧಿಗೆ ಕಾರಣವಾಗಬೇಕೆಂದು ಕರೆ ನೀಡಿದರು.
ಶಾಲಾ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಚಾಲಕ ಶಿಕ್ಷಕ ಮನೋಹರ ಹರಿಕಂತ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾರ ಮುಖ್ಯಾಧ್ಯಾಪಕ ಅರುಣ್ ನಾಯ್ಕ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ತಿಳಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಊರ ನಾಗರಿಕರು ಈ ಜಾಥಾದಲ್ಲಿ ಪಾಲ್ಗೊಂಡು ಮೂರೂರು ಪಂಚಾಯತ್ ಭಾಗದಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಶಾಲಾ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಜನ ಮೆಚ್ಚುಗೆಗೆ ಪಾತ್ರವಾಯಿತು.