Slide
Slide
Slide
previous arrow
next arrow

ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಆರ್.ವಿ.ದೇಶಪಾಂಡೆ

300x250 AD

ದಾಂಡೇಲಿ: ರಾಷ್ಟ್ರದ ಪ್ರಗತಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ಸದೃಢ ಆರೋಗ್ಯವಂತ ಮತ್ತು ಶಿಕ್ಷಣವಂತ ಸಮಾಜದಿಂದ ಬಲಿಷ್ಟ ರಾಷ್ಟ್ರ ನಿರ್ಮಾಣ ಸಾಧ್ಯ. ಈ ದಿಸೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಂದು ಆಧುನೀಕತೆ, ತಾಂತ್ರಿಕತೆ ನಾಗಲೋಟದಲ್ಲಿ ಓಡುತ್ತಿರುವ ಈ ಜಗತ್ತಿನಲ್ಲಿ ಶಿಕ್ಷಣ ಅತೀ ಅವಶ್ಯಕವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಉನ್ನತ ಆದರ್ಶ ಸಂಸ್ಕಾರಗಳನ್ನೊಳಗೊ0ಡ ನೈತಿಕ ಶಿಕ್ಷಣವು ನೀಡಬೇಕಾದ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕರಾದ ಆರ್.ವಿ.ದೇಶಪಾಂಡೆಯವರು ಹೇಳಿದರು.
ಅವರು ನಗರದ ಜನತಾ ವಿದ್ಯಾಲಯದಲ್ಲಿ ಶನಿವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತು ಉತ್ತರ ಕನ್ನಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆ, ಉಪ ನಿರ್ದೇಶಕರ ಕರ‍್ಯಾಲಯ ಶಿರಸಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕರ‍್ಯಾಲಯ ಹಳಿಯಾಳ ಇವರ ಸಂಯುಕ್ತಾಶ್ರಯದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.
ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಮಹೋನ್ನತ ಕೊಡುಗೆ ನೀಡಿದವರು ದಿನಕರ ದೇಸಾಯಿಯವರು. ದಿನಕರ ದೇಸಾಯಿಯವರು ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿರುವುದು ಮತ್ತು ವೇದಿಕೆಗೆ ದಿನಕರ ದೇಸಾಯಿಯವರ ಹೆಸರನ್ನಿಟ್ಟು ಸ್ಮರಣೆ ಮಾಡಿರುವುದು ಔಚಿತ್ಯಪೂರ್ಣವಾಗಿದೆ. ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೆಳಕು ನೀಡಿದ ಸಂಸ್ಥೆ ಜನತಾ ವಿದ್ಯಾಲಯ ಎಂದ ಅವರು, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳ ಪ್ರತಿಭೆಗಳು ಈ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಮೂಲಕ ನಾಡಿನ ಉದ್ದಗಲಕ್ಕೂ ಪಸರಿಸುವಂತಾಗಲೆ0ದು ಶುಭ ಹಾರೈಸಿ, ಪ್ರತಿಯೊಬ್ಬ ಪಾಲಕನು ಮಗುವಿನ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಹೇಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ಪಾರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕರ‍್ಯಕ್ರಮವನ್ನು ಆಯೋಜನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ಪಾರಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಮುಖ್ಯವಾಹಿನಿಗೆ ತರುವುದರ ಜೊತೆಗೆ ಅದನ್ನು ಪ್ರೋತ್ಸಾಹಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಜಿಲ್ಲಾ ಮಟ್ಟದ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಶ್ರಮಿಸಿದ ಮತ್ತು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕರ‍್ಯಕ್ರಮದಲ್ಲಿ ಭಾಗವಹಿಸಿದ ಸರ್ವರಿಗೂ ಊಟೋಪಚಾರದ ವ್ಯವಸ್ಥೆಯ ಜವಾಬ್ದಾರಿಯನ್ನು ವಹಿಸಿಕೊಂಡ ಜನತಾ ಸಂಯುಕ್ತ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯರಾದ ಎಂ.ಎಸ್.ಇಟಗಿ ಮತ್ತು ಜೆವಿಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಕಿಶೋರ ಕಿಂದಳ್ಕರ್ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷರಾದ ಸಂಜಯ್ ನಂದ್ಯಾಳ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ನಾಯ್ಕರ್, ತಹಶೀಲ್ದಾರ್ ಶೈಲೇಶ್ ಪರಮನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್ ತಾಲ್ಲೂಕು ಪಂಚಾಯ್ತು ಕರ‍್ಯನಿರ್ವಾಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಆರ್.ಹೆಗಡೆ, ಹಳಿಯಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಜೋಯಿಡಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಸೀರ್ ಶೇಖ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ನಾರಾಯಣ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕರ‍್ಯದರ್ಶಿ ಬಾಲಚಂದ್ರ ಪಟಗಾರ ಮೊದಲಾದವರು ಉಪಸ್ಥಿತರಿದ್ದರು.
ಕರ‍್ಯಕ್ರಮದ ಆರಂಭದಲ್ಲಿ ನಡೆದ ಗೌಳಿ ನೃತ್ಯ ಮತ್ತು ರೈತ ಗೀತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಜನತಾ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯಿನಿ ನಂದಿನಿ ನಾಯ್ಕ ಅವರು ಪ್ರಾರ್ಥನೆ ಗೀತೆ ಹಾಡಿದರು. ಡಿಡಿಪಿಐ ಬಸವರಾಜ ಪಾರಿಯವರು ಸ್ವಾಗತಿಸಿದ ಕರ‍್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ ವಂದಿಸಿದರು. ಶಿಕ್ಷಕಿ ಆಶಾ ಕಿಂದಳ್ಕರ್ ಮತ್ತು ಶಿಕ್ಷಕ ಮಲ್ಲನಗೌಡ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top