ಮುಂಬೈ: ಬೆಳಗಾವಿ ಗಡಿ ವಿಚಾರದಲ್ಲಿ ಕರ್ನಾಟಕದ ಜೊತೆ ಕಿರಿಕ್ ಮುಂದುವರೆಸಿರುವ ಮಹಾರಾಷ್ಟ್ರ, ಈಗ ಮತ್ತೊಂದು ಹೊಸ ವರಸೆ ಶುರು ಮಾಡಿದೆ. ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ನಿಪ್ಪಾಣಿ ಹಾಗೂ ಕಾರವಾರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಂಗೀಕರಿಸುವ ಪ್ರಸ್ತಾವನೆಯಲ್ಲಿ ಸೇರಿಸಬೇಕು ಎಂದೂ ತಿಳಿಸಿದ್ದಾರೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ವಿರುದ್ಧ ಕೂಡ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಆಕ್ರಮಣಕಾರಿ ಹೇಳಿಕೆ ನೀಡುತ್ತಿದ್ದರೆ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮೌನವಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕ ಗಡಿ ವಿವಾದದ ನಿರ್ಣಯವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ನಾವು ಗಡಿ ಪ್ರದೇಶಗಳಲ್ಲಿ ವಾಸಿಸುವ ನಮ್ಮ ಜನರನ್ನು ಒಂಟಿಯಾಗಿ ಬಿಡುವುದಿಲ್ಲ. ನಾವು ಪ್ರತಿ ಇಂಚು ಭೂಮಿಗಾಗಿ ಸುಪ್ರೀಂ ಕೋರ್ಟ್ನಲ್ಲಿ ಹೋರಾಡುತ್ತೇವೆ ಅಥವಾ ನಾವೇ ಖುದ್ದಾಗಿ ಹೋರಾಡುತ್ತೇವೆ ಎಂದಿದ್ದಾರೆ. ಗಡಿಯಲ್ಲಿ ವಾಸಿಸುವ ಮರಾಠಿ ಭಾಷಿಕರಿಗೆ ಅನ್ಯಾಯವಾದರೆ ಅದರ ವಿರುದ್ಧ ನಾವು ಹೋರಾಡುತ್ತೇವೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಮಹಾರಾಷ್ಟ್ರವು ತನ್ನ ಪಟ್ಟುಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರವಾರ, ಬೆಳಗಾವಿ, ನಿಪ್ಪಾಣಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ: ಉದ್ಧವ್ ಠಾಕ್ರೆ
