ಕಾರವಾರ: ರಾಜ್ಯ ಸರ್ಕಾರದ ವತಿಯಿಂದ ಸುಶಾಸನ ದಿನದ ಆಚರಣೆ ಸಂಬಂಧ ರಾಜ್ಯ ಮಟ್ಟದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ತಾಲೂಕಿನ ಮಾಜಾಳಿ ಸರ್ಕಾರಿ ಎಂಜಿನಿಯರಿoಗ್ ಕಾಲೇಜು ಎರಡು ಪ್ರಶಸ್ತಿಗೆ ಭಾಜನವಾಗಿದೆ.
ಅತ್ಯುತ್ತಮ ಸಾಂಸ್ಥಿಕ ಅಭಿವೃದ್ಧಿ ಯೋಜನೆ (ಐಡಿಪಿ- ಇನ್ಸ್ಟಿಟ್ಯೂಷನಲ್ ಡೆವಲಪ್ಮೆಂಟ್ ಪ್ಲಾನ್)ಯಲ್ಲಿ ರಾಜ್ಯ ಮಟ್ಟದಲ್ಲಿ ಮಾಜಾಳಿ ಸರ್ಕಾರಿ ಎಂಜಿನಿಯರಿoಗ್ ಕಾಲೇಜು ಪ್ರಥಮ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಅದಕ್ಕಾಗಿ ಕಾಲೇಜು ಪ್ರಾಂಶುಪಾಲರಾದ ಡಾ.ಶಾಂತಲಾ ಬಿ. ಅವರು ಸಂಸ್ಥೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜೇತ ಕಲ್ಮಾಡಿ ಪ್ರಥಮ ಸ್ಥಾನ ಪಡೆದುಕೊಂಡು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ ಸುಶಾಸನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಶಸ್ತಿ ಪ್ರದಾನ ಮಾಡಿದರು. ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಜೀವನೋಪಾಯ ಮಿಷನ್ ವ್ಯವಸ್ಥಾಪಕ ನಿರ್ದೇಶಕರು, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆಯುಕ್ತರು ಮತ್ತಿತರರು ಪಾಲ್ಗೊಂಡಿದ್ದರು.