ಯಲ್ಲಾಪುರ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಡಿ.ಎನ್.ಗಾಂವಕರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಡಿ.ಎನ್.ಗಾಂವ್ಕರ ಅವರಿಗೆ ಕಳಿಸಿರುವ ಪತ್ರದಲ್ಲಿ, ತಕ್ಷಣ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ.
ಗಾಂವ್ಕರ ಅವರು ಹಲವಾರು ವರ್ಷದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಒಂದೂವರೆ ವರ್ಷದ ಹಿಂದೆ ಕಾಂಗ್ರೆಸ್ ಪಕ್ಷದ ವಿ.ಎಸ್.ಭಟ್ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ನೀಡಲಾಗಿತ್ತು. ಇದೀಗ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಹಲವಾರು ಬದಲಾವಣೆಗಳನ್ನ ಮಾಡುತ್ತಿದ್ದು, ಹಿಂದಿನ ಅಧ್ಯಕ್ಷರಾಗಿದ್ದ ಡಿ.ಎನ್.ಗಾಂವ್ಕರ ಅವರನ್ನೇ ಮತ್ತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿದೆ.
ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವೆ…
ಕಳೆದ 17 ವರ್ಷ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದೆ. ವರ್ಷದ ಹಿಂದೆ ಪಕ್ಷ ಬೇರೊಬ್ಬ ವ್ಯಕ್ತಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜವಾಬ್ದಾರಿಯನ್ನು ನೀಡಿತು. ಕಾಂಗ್ರೆಸ್ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸದೆ ಹುದ್ದೆಯನ್ನು ಬಿಟ್ಟುಕೊಟ್ಟಿದ್ದೇನೆ. ಇದೀಗ ನಾನು ನಿರೀಕ್ಷಿಸದೆ ಇರುವ ಸಂದರ್ಭದಲ್ಲಿ ಪಕ್ಷ ಮತ್ತೊಮ್ಮೆ ನನಗೆ ಅದೇ ಜವಾಬ್ದಾರಿಯನ್ನು ನೀಡಿದೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಡಿ.ಎನ್.ಗಾಂವ್ಕರ ತಿಳಿಸಿದ್ದಾರೆ.