ಸಿದ್ದಾಪುರ: ಪಟ್ಟಣದ ಬಾಲಭವನದಲ್ಲಿ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಮಾತನಾಡಿದ ಮಾರುತಿ ನಾಯ್ಕ ಹೊಸೂರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಈ ಮೂಲಕ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ನಮ್ಮ ಕಾರ್ಯಕರ್ತರು ಈ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕಾಗಿದೆ. ಒಂದೊಮ್ಮೆ ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ನಾವು ವಿಫಲರಾದಲ್ಲಿ ಅದನ್ನು ಕಾಂಗ್ರೆಸ್ ಪಕ್ಷ ತಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಯೋಜನೆ ಎಂದು ಪುಕ್ಕಟೆ ಪ್ರಚಾರವನ್ನು ಗಿಟ್ಟಿಸಿಕೊಳ್ಳುತ್ತವೆ. ಪ್ರತಿಯೊಂದು ಕುಟುಂಬವೂ ಒಂದಲ್ಲಾ ಒಂದು ರೀತಿಯಲ್ಲಿ ನಮ್ಮ ಸರ್ಕಾರದ ಯೋಜನೆಯ ಫಲಾನುಭವಿಗಳಿದ್ದು, ಅದನ್ನು ತಿಳಿಸುವಂತಹ ಕಾರ್ಯ ನಮ್ಮಿಂದ ನಡೆಯಬೇಕು ಎಂದರು.
ಮಂಡಲ ಪ್ರಭಾರಿ ಕುಮಾರ ಮಾರ್ಕಾಂಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ ಬೂತ್ ವಿಜಯ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಮನೆ-ಮನೆ ಸಂಪರ್ಕ ಅಭಿಯಾನದ ಕುರಿತು ಮಾಹಿತಿ ನೀಡಿದರು. ಸರಳ್ ಆ್ಯಪ್ ಬಗ್ಗೆ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ವಿನಾಯಕ ಹೆಗಡೆ ಮಾಹಿತಿ ನೀಡಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಸ್ವಾಗತಿಸಿದರು. ಮಹಾಬಲೇಶ್ವರ ಹೆಗಡೆ ವಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ ಕಡಕೇರಿ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ, ಮಂಡಲ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಮೇಸ್ತ, ಪಟ್ಟಣ ಪಂಚಾಯತ ಸದಸ್ಯರು, ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಸದಸ್ಯರು, ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.