ಭಟ್ಕಳ: ಫೆ.17ರಂದು ತಾಲೂಕಿನ ಮುರ್ಡೇಶ್ವರದಲ್ಲಿ ನಡೆಯಲಿರುವ ತಾಲೂಕಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕವಿ ಮಾನಾಸುತ ಹೆಗಡೆ ಆಯ್ಕೆಯಾಗಿದ್ದಾರೆ. ಇವರನ್ನು ಸಮ್ಮೇಳನಾಧ್ಯಕ್ಷರಾಗಿ ತಾಲೂಕು ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಶಂಭು ಹೆಗಡೆಯವರು ಕವಿಯಾಗಿ ಪ್ರಕಾಶಕರಾಗಿ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾನಾಸುತ ಎಂಬ ಕಾವ್ಯನಾಮದಿಂದ ಚುಟುಕುಬಳ್ಳಿ, ನಾಲ್ಕುಸಾಲು, ಜೇನಹನಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಶಾಂಭವಿ ಪ್ರಕಾಶನದ ಮೂಲಕ ತಂದೆಯವರಾದ ಮಾಳ್ಕೋಡು ನಾರಾಯಣ ಹೆಗಡೆಯವರ ಕಾದಂಬರಿ, ಕವನ ಸಂಕಲನ, ಯಕ್ಷಗಾನಕ್ಕೆ ಸಂಬಂಧಿಸಿದಂತೆ 10 ಕೃತಿಗಳನ್ನು ಪ್ರಕಟಿಸಿದ್ದಾರೆ. ಹೀಗೆ ಕವಿಯಾಗಿ ಪ್ರಕಾಶಕರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮಾನಾಸುತ ವೃತ್ತಿಯಲ್ಲಿ ಭಟ್ಕಳ ಅರ್ಬನ್ ಬ್ಯಾಂಕಿನ ವ್ಯವಸ್ಥಾಪಕರಾಗಿ, ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದಾರೆ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.