
ಬೆಂಗಳೂರು: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಈಡಿಗ-ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬೇಡಿಕೆ ಬಹಳ ದಿನಗಳಿಂದ ಇತ್ತು. ಕೆಲ ದಿನಗಳ ಹಿಂದಷ್ಟೇ ಸಚಿವ ವಿ ಸುನಿಲಕುಮಾರ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ನಿಗಮ ಸ್ಥಾಪನೆಗೆ ಮನವಿ ಸಲ್ಲಿಸಿತ್ತು. ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು.
ಆದರೆ ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಬಗ್ಗೆ ಪ್ರಸ್ತಾವನೆ ಇರಲಿಲ್ಲ. ನಂತರ ಎರಡು ದಿನಗಳ ಹಿಂದೆ ಸಚಿವರಾದ ಕೋಟ ಶ್ರೀಣಿವಾಸ ಪೂಜಾರಿ ಅವರು ಟ್ವೀಟ್ ಮಾಡಿ ಇನ್ನೆರಡು ದಿನಗಳಲ್ಲಿ ನಿಗಮ ರಚನೆ ಕುರಿತು ಸರ್ಕಾರ ಆದೇಶ ಹೊರಡಿಸಲಿದೆ ಎಂದು ನಾನು ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದರು. ಅದರಂತೆ ಈಗ ಸರ್ಕಾರ ಆದೇಶ ಹೊರಡಿಸಿದೆ.