ಹೊನ್ನಾವರ: ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಿದ್ದು, ಜನರ ಸಹಕಾರದೊಂದಿಗೆ ಸ್ವಚ್ಛ ಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸುವ ವಿಶ್ವಾಸವಿದೆ ಎಂದು ತಾಲ್ಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ತಿಳಿಸಿದರು.
ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತ ಚಿಕ್ಕನಕೋಡ, ಸ.ಹಿ.ಪ್ರಾ.ಶಾಲೆ ಗುಂಡಿಬೈಲ್ ನಂ.2, ಸ್ಪಂದನ ವೇದಿಕೆ ಹಾಗೂ ಕಾಮಕೋಡ ಪರಿಸರ ಕೂಟಗಳ ಸಂಯುಕ್ತ ಆಶ್ರಯದಲ್ಲಿ ಗುಂಡಿಬೈಲ್‌ನಲ್ಲಿ ನಡೆದ ‘ಸ್ವಚ್ಛತೆ ಅರಿವು ಹಾಗೂ ಜಾಗೃತಿ ಅಭಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಮಾತನಾಡಿ, ಗಾಂಧಿ ಜಯಂತಿಯ ನಂತರ ಸ್ವಚ್ಛತೆಯ ಕುರಿತಂತೆ ವಿಸ್ಮೃತಿ ಆವರಿಸುವುದಕ್ಕೆ ಅವಕಾಶ ನೀಡಬಾರದು. ಪ್ಲಾಸ್ಟಿಕ್ ತ್ಯಾಜ್ಯ ಸುಡುವ ತೀರ ಅಪಾಯಕಾರಿ ಪ್ರವೃತ್ತಿ ಕಂಡುಬರುತ್ತಿದ್ದು, ಪ್ಲಾಸ್ಟಿಕ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸುವ ಅಗತ್ಯವಿದೆ ಎಂದು ಹೇಳಿದರು.
ಜಾಗೃತಿ ಜಾಥಾ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ ಸಿ. ಮಾತನಾಡಿ, ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ವಿಲೇವಾರಿ ಮನುಕುಲಕ್ಕೆ ಒಂದು ಸವಾಲಾಗಿ ಪರಿಣಮಿಸಿದೆ. ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಜನರು ಆರೋಗ್ಯದಿಂದಿರಲು ಸಾಧ್ಯ. ಪರಿಸರದ ಕುರಿತು ಮಕ್ಕಳಲ್ಲಿ ಜಾಗೃತಿ ಮುಡಿಸುವ ಕಾರ್ಯ ಸ್ತುತ್ಯಾರ್ಹ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ ವಿಘ್ನೇಶ್ವರ ಹೆಗಡೆ, ಗ್ರಾಮ ಪಂಚಾಯತ ವ್ಯಾಪ್ತಿಯ ಪ್ರತಿ ವಾರ್ಡ್ನಲ್ಲಿ ಸ್ವಚ್ಛತೆಯ ಕುರಿತಾದ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾ ಹೆಗಡೆ ಸ್ವಾಗತಿಸಿದರು. ಪ್ರೊ.ನಾಗರಾಜ ಹೆಗಡೆ ಅಪಗಾಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ.ಎಂ.ಜಿ.ಹೆಗಡೆ ನಿರೂಪಿಸಿದರು. ಮುಖ್ಯ ಶಿಕ್ಷಕಿ ತುಳಸಿ ದೇಶಭಂಡಾರಿ ವಂದಿಸಿದರು. ಜಾಗೃತಿ ಜಾಥಾ ಹಾಗೂ ಸ್ವಚ್ಛತಾ ಕಾರ್ಯದಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು,ಗ್ರಾಮ ಪಂಚಾಯತ ಸಿಬ್ಬಂದಿ ಸೇರಿದಂತೆ ನೂರಾರು ಸಾರ್ವಜನಿಕರು ಭಾಗವಹಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಕೆ.ಸುದರ್ಶನ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ, ಗ್ರಾಮ ಪಂಚಾಯತ ಉಪಾಧ್ಯಕ್ಷೆ ಆಶಾ ನಾಯ್ಕ, ಸದಸ್ಯರಾದ ನಾಗೇಶ ನಾಯ್ಕ, ಕೃಷ್ಣ ನಾಯ್ಕ, ಶಾಮಲಾ ನಾಯ್ಕ, ಭಾರತಿ ನಾಯ್ಕ, ಲಕ್ಷಿö್ಮ ಹಳ್ಳೇರ್, ಮಾದೇವಿ ಹಳ್ಳೇರ್, ಮಾಲಿನಿ ಜೈನ್, ನಾಗೇಶ ನಾಯ್ಕ ಬಡ್ನಕೋಡ್ಲ್ ಇದ್ದರು.