ಕುಮಟಾ : ಪಟ್ಟಣದ ಮಣಕಿ ಮೈದಾನದಲ್ಲಿ ಮಾರ್ಚ್ 17ರಂದು ಬೆಳಿಗ್ಗೆ 11 ಗಂಟೆಗೆ ಉತ್ತರಕನ್ನಡ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದ ಸುಮಾರು ಇಪ್ಪತ್ತುಸಾವಿರ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ತನ್ನಿಮಿತ್ತ ಬುಧವಾತ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ದಿನಕರ ಕೆ. ಶೆಟ್ಟಿ ಸಮಾವೇಶ ನಡೆಯಲಿರುವ ಸ್ಥಳಕ್ಕೆ ಭೇಟಿನೀಡಿ, ಪೂರ್ವಸಿದ್ಧತೆಯ ಕುರಿತು ಅಧಿಕಾರಿಗಳೊಡನೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಕಂದಾಯ ಇಲಾಖೆ ಹಕ್ಕು ಪತ್ರ, ಗ್ರಾಮೀಣಾಭಿವೃದ್ಧಿ ಇಲಾಖೆಯ ವಿವಿಧ ಯೋಜನೆ, ವಸತಿ ಯೋಜನೆಯ ಮನೆ ಮಂಜೂರಾತಿ ಹಕ್ಕುಪತ್ರ, ಸಮಾಜ ಕಲ್ಯಾಣ ಇಲಾಖೆಯಿಂದ ಸ್ವ ಉದ್ಯೋಗಕ್ಕೆ 600 ದ್ವಿಚಕ್ರ ವಾಹನ, ಹಿಂದುಳಿದ ವರ್ಗಗಳ ಮಹಿಳೆಯರಿಗೆ 240 ಹೊಲಿಗೆ ಯಂತ್ರ ವಿತರಣೆ ಸೇರಿದಂತೆ ಸರ್ಕಾರದ ಇನ್ನುಳಿದ ಇಲಾಖೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದರು.
ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದೆ. ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ ಹೆಗಡೆ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದು, ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದ್ದು, ಅವರು ಆಗಮಿಸುವ ನಿರೀಕ್ಷೆಯಿದೆ ಎಂದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ.ಎನ್, ಸಹಾಯಕ ಆಯುಕ್ತ ರಾಘವೇಂದ್ರ ಜಗಲಾಸರ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅಜ್ಜಯ್ಯ, ತಹಸೀಲ್ದಾರ ಸತೀಶ ಗೌಡ, ತಾ.ಪಂ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ನಾಗರತ್ನಾ ನಾಯಕ, ಭಟ್ಕಳ ಡಿ.ಎಸ್.ಪಿ ಶ್ರೀಕಾಂತ, ಪುರಸಭಾ ಅಧ್ಯಕ್ಷರಾದ ಅನುರಾಧಾ ಬಾಳೇರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭಾ ಸದಸ್ಯರು ಇದ್ದರು.