ಕಾರವಾರ: ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್‌ರವರ ಜಯಂತಿಯನ್ನು ಬಿಜೆಪಿ ಕಾರ್ಯಾಲಯದಲ್ಲಿ ಭಾರತ ಮಾತೆ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಶಾಸಕಿ ರೂಪಾಲಿ ನಾಯ್ಕ್ ಸೇರಿದಂತೆ ನಗರ ಹಾಗೂ ಗ್ರಾಮೀಣ ಮಂಡಲ ಅಧ್ಯಕ್ಷ ನಾಗೇಶ್ ಕುರುಡೇಕರ್, ಸುಭಾಷ್ ಗುನಗಿ, ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ, ಉಪಾಧ್ಯಕ್ಷ ಪಿ.ಪಿ.ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಮನೋಜ್ ಬಾಂದೇಕರ್, ನಗರಸಭೆ ಸದಸ್ಯೆ ಮಾಲಾ ಹುಲಸ್ವಾರ, ಓಬಿಸಿ ರಾಜ್ಯ ಕಾರ್ಯಕಾರಣಿ ಸದಸ್ಯ ರಾಜೇಂದ್ರ ನಾಯ್ಕ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗುನಗಿ ಇದ್ದರು.
ಕಾರ್ಯಕ್ರಮದಲ್ಲಿ ಗಣ್ಯರು ಬಾಬಾ ಸಾಹೇಬ ಅಂಬೇಡ್ಕರ್‌ರವರ 132ನೇ ಜಯಂತಿಯ ಶುಭಾಶಯ ಕೋರಿ ಮಹಾನ್ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಚರಿತ್ರೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ 2ನೇ ಬಾರಿ ಅಭ್ಯರ್ಥಿಯಾಗಿ ಆಯ್ಕೆಯಾದ ಶಾಸಕರನ್ನು ಅಭಿನಂದಿಸಲಾಯಿತು.
ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ವಿಧಾನಸಭಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಎಲ್ಲ ಬಿಜೆಪಿ ಹಿರಿಯರಿಗೆ, ಮುಖಂಡರಿಗೆ, ಪ್ರಮುಖರಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಮನಃಪೂರ್ವಕವಾಗಿ ಧನ್ಯವಾದಗಳನ್ನು ತಿಳಿಸಿದರು. ಮುಂದಿನ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ನನ್ನ ಕ್ಷೇತ್ರವಾದ ಕಾರವಾರ- ಅಂಕೋಲಾದಲ್ಲಿ ಆಗಿರುವ ಸಾಧನೆಗಳನ್ನು ಮನೆಮನೆ ತಲುಪಿಸುವ ಕಾರ್ಯ ಆಗಬೇಕೆಂದು ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಮುಖಂಡರು, ಪದಾಧಿಕಾರಿಗಳು, ಚುನಾಯಿತ ಸದಸ್ಯರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.