ಸಿದ್ದಾಪುರ: ತಾಲ್ಲೂಕಿನ ಬಿಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಂಜು ಗ್ರಾಮದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಸ್ಥಳದಲ್ಲಿ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಕೆಹೆಚ್‌ಪಿಟಿ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಗ್ರಾಮ ಆರೋಗ್ಯ ಅಭಿಯಾನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
ಬಿಳಗಿ ಗ್ರಾಮ ಪಂಚಾಯತಿ ಸದಸ್ಯರಾದ ರಾಜು ನಾಯ್ಕ ಹಾಗೂ ಸುವರ್ಣ ನಾಯ್ಕ ಶಿಬಿರವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದ ತಾಲ್ಲೂಕು ಸಂಯೋಜಕರಾದ ರಮೇಶ ನಾಯ್ಕ ಮಾತನಾಡಿ, ಗ್ರಾಮೀಣ ಭಾಗದ ಪ್ರತಿ ಸಮುದಾಯದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆಯನ್ನು ಒದಗಿಸುವ ಸದುದ್ದೇದಿಂದ ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ನಡೆಸಲಾಗುತ್ತಿದೆ. ಪ್ರಸ್ತುತವಾಗಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನರೇಗಾ ಕೂಲಿಕಾರರ ಆರೋಗ್ಯದತ್ತ ಗಮನಹರಿಸಿದ್ದು, ಗ್ರಾಮ ಆರೋಗ್ಯ ಅಭಿಯಾನದ ಮೂಲಕ ಪ್ರಾಥಮಿಕ ಹಂತದಲ್ಲಿ ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಮಧುಮೇಹ, ರಕ್ತಹೀನತೆ, ಕ್ಯಾನ್ಸರ್ ಮತ್ತು ಮಾನಸಿಕ ಕಾಯಿಲೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಜೊತೆಗೆ ಅನಾರೋಗ್ಯ ಸಮಸ್ಯೆಗಳ ನಿವಾರಣೆಗೆ ಕ್ರಮವಹಿಸಲಾಗುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಮುದಾಯ ಆರೋಗ್ಯ ಅಧಿಕಾರಿ ಅನುರಾಧ ಅವರ ತಂಡ ಕಾಮಗಾರಿ ಸ್ಥಳದಲ್ಲಿದ್ದ 100 ಕ್ಕೂ ಅಧಿಕ ನರೇಗಾ ಕೂಲಿ ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಮತ್ತು ರಕ್ತಹೀನತೆ ಕಾಯಿಲೆ ಕುರಿತು ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ, ಸೂಚನೆಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ನಾಗೇಶ ಹೆಚ್. ಪಿ., ಸಿಬ್ಬಂದಿ ಉಪಸ್ಥಿತರಿದ್ದರು.