ಅಂಕೋಲಾ: ಬೆಂಗಳೂರಿನ ಕೆಪಿಸಿಸಿ ಭವನದಲ್ಲಿ ನಡೆದ ರಾಜ್ಯಮಟ್ಟದ ಕಾರ್ಮಿಕ ವಿಭಾಗದ ಸಭೆಯಲ್ಲಿ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ಇವರನ್ನು ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಿದರು. ಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿದ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಡಿ.ಜಿ.ನಾಯ್ಕ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಖಾನೆಗಳ ಕೊರತೆಯಿಂದಾಗಿ ನಿರುದ್ಯೋಗ ಹೆಚ್ಚಾಗುತ್ತಿದೆ. ಹೀಗಾಗಿ ಕಲಿತ ವಿದ್ಯಾರ್ಥಿಗಳು ವಲಸೆ ಹೋಗುವಂತಾಗಿದೆ. ಇನ್ನು ಕಾರವಾರ ಕೈಗಾ, ಸೀಬರ್ಡ್ ಯೋಜನೆಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡುವಂತೆ ಪ್ರಯತ್ನಿಸಬೇಕಾಗಿದೆ. ಶಾಸಕ ಸತೀಶ ಸೈಲ್ ಪ್ರಯತ್ನ ಪಡುತ್ತಿದ್ದು, ಅವರ ಜತೆ ರಾಜ್ಯ ಸಮಿತಿಯು ಕೂಡ ಸಹಕರಿಸಬೇಕು ಎಂದರು.
ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಸಾಕಷ್ಟು ಚರ್ಚೆಗಳು ನಡೆದವು. ಬಳಿಕ ರಾಜ್ಯಾಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ಮಾತನಾಡಿ, ಸದ್ಯದಲ್ಲಿಯೇ ರಾಜ್ಯದ ನಿಯೋಗ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಲಿದೆ. ಆಗ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯುವುದರ ಜತೆಗೆ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ಮುಂತಾದ ವಿಷಯಗಳ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ ಶಿರಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ ನಾಯ್ಕ ಸಿದ್ದಾಪುರ, ಅಂಕೋಲಾ ತಾಲೂಕು ಅಧ್ಯಕ್ಷ ಸಂತೋಷ ಜೆ. ನಾಯ್ಕ, ಸಿದ್ದಪ್ಪ ಕಿರವತ್ತಿ ಯಲ್ಲಾಪುರ, ಕಾರ್ಯದರ್ಶಿ ರಮೇಶ ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದು ಚರ್ಚಿಸಿದರು.