ಕಾರವಾರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಖಾಸಗಿ ಸ್ಕ್ಯಾನಿಂಗ್ ಸೆಂಟರ್‌ಗಳು ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನೀರಜ್ ಬಿ.ವಿ. ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಮ್ಮಿಕೊಂಡಿದ್ದ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ)ಕಾಯ್ದೆಯ ಅನುಷ್ಠಾನದ ಕುರಿತ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡುವುದು ಹಾಗೂ ಸ್ಕ್ಯಾನಿಂಗ್ ಸಂಸ್ಥೆಯವರು ಪಿ.ಸಿ&ಪಿ.ಎನ್.ಡಿ.ಟಿ ಕಾಯ್ದೆ, ಕಾನೂನನ್ನು ಅನುಷ್ಠಾನಗೊಳಿಸದೇ ಇರುವುದು ಶಿಕ್ಷಾರ್ಹ ಅಪರಾಧ. ಜಿಲ್ಲೆಯಲ್ಲಿ ಲಿಂಗಾನುಪಾತ ಕುಸಿದಿರುವುದರಿಂದ ಪುರುಷ ಹಾಗೂ ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಠಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಕೈಗೊಳ್ಳಬೇಕಾಗಿದೆ ಎಂದರು.
ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸಂಸ್ಥೆಗಳನ್ನು ಮೂರು ತಿಂಗಳಿಗೊಮ್ಮೆ ಭೇಟಿ ಮಾಡಿ ತಪಾಸಣೆ ಹಾಗೂ ಮೇಲ್ವಿಚಾರಣೆಯನ್ನು ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಪಿ.ಸಿ&ಪಿ.ಎನ್.ಡಿ.ಟಿ ಕಾಯ್ದೆಯನ್ನು ಅನ್ಠುಷಾನ ಮಾಡದೇ ಇರುವ ಸಂಸ್ಥೆಗಳಿಗೆ ಒಂದು ಬಾರಿ ನೋಟಿಸ್ ನೀಡುವುದು, ಆದರೂ ಅನುಷ್ಠಾನಗೊಳಿಸದೇ ಇದ್ದಲ್ಲಿ ಅಂತಹ ಸ್ಕ್ಯಾನಿಂಗ್ ಸೆಂಟರಗಳ ಮೇಲೆ ಕಾನೂನಿನನ್ವಯ ನಿರ್ದಾಕ್ಷಿಣ್ಯ ಕ್ರಮವಹಿಸುವಂತೆ ಸೂಚಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ ಮಾತನಾಡಿ, ಜಿಲ್ಲೆಯಲ್ಲಿ ಪಿ.ಸಿ&ಪಿ.ಎನ್.ಡಿ.ಟಿ ಕಾಯ್ದೆಯ ಅಡಿಯಲ್ಲಿ ಓಟ್ಟೂ 81 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಪಶುಪಾಲನಾ ಇಲಾಖೆಯ 03 ಸ್ಕ್ಯಾನಿಂಗ್ ಸೆಂಟರಳಿರುತ್ತವೆ. ಅನಧಿಕೃತವಾದ ಯಾವುದೇ ಸ್ಕ್ಯಾನಿಂಗ್ ಸೆಂಟರ್ ಇರುವುದು ಕಂಡುಬoದಿರುವುದಿಲ್ಲ ಎಂದರು. ಸ್ಕ್ಯಾನಿಂಗ್ ಸೆಂಟರ್‌ಗಳು ವೈದ್ಯರ ಶಿಫಾರಸ್ಸು ಪತ್ರದ ಆಧಾರದ ಮೇಲೆ ಸ್ಕ್ಯಾನಿಂಗ್ ಕಾರ್ಯವನ್ನು ಕೈಗೊಳ್ಳಬೇಕು. ಅನಧಿಕೃತವಾಗಿ ನಿರ್ವಹಣೆ ಮಾಡಿದ್ದಲ್ಲಿ ನಿಯಮಾನುಸಾರ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಡಾ.ವಿಶ್ವನಾಥ ಮಾಚಕನೂರ, ಡಾ.ಯುವರಾಜ್ ಪಟವರ್ಧನ್, ವಕೀಲರಾದ ಮಾರುತಿ ಎಮ್.ಮರಜ್ಜ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ನಾಯ್ಕ ಹಾಗೂ ಇತರ ಸದಸ್ಯರು ಉಪಸ್ಥಿತರಿದ್ದರು.