ಬೆಂಗಳೂರು: ವಿಜ್ಞಾನಿ ಡಾ.ಕೆ. ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ನೀಡಿರುವ ವರದಿಯನ್ನು ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಸ್ತೂರಿರಂಗನ್ ವರದಿಯ ಶಿಫಾರಸುಗಳು ಅನುಷ್ಠಾನದ ಕುರಿತು ಸಂಜಯ್ ಕುಮಾರ್ ನೇತೃತ್ವದ ಸಮಿತಿ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿಯು ಡಿಸೆಂಬರ್ ವೇಳೆಗೆ ತನ್ನ ಅಭಿಪ್ರಾಯಗಳನ್ನು ನೀಡಲಿದ್ದು, ನಂತರ ಸರ್ಕಾರವು ವರದಿಯ ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಿದೆ ಎಂದರು.
ಪಶ್ಚಿಮ ಘಟ್ಟಗಳ ಬಹುಭಾಗ ಕರ್ನಾಟಕದಲ್ಲಿದೆ. 11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಶ್ಚಿಮ ಘಟ್ಟಗಳು ವ್ಯಾಪಿಸಿವೆ. ಕಸ್ತೂರಿರಂಗನ್ ಸಮಿತಿ ನೀಡಿರುವ ವರದಿ 10 ವರ್ಷಗಳಿಂದ ಬಾಕಿ ಇದೆ. ಅದಕ್ಕೂ ಹಿಂದೆ ಮಾಧವ ಗಾಡ್ಗೀಳ್ ನೇತೃತ್ವದ ಸಮಿತಿ ನೀಡಿದ್ದ ವರದಿಯೂ ಅನುಷ್ಠಾನಕ್ಕೆ ಬಂದಿರಲಿಲ್ಲ. ಈಗ ಪಶ್ಚಿಮ ಘಟ್ಟಗಳಲ್ಲಿ ವಾಸಿಸುವ ಜನರ ಹಿತಾಸಕ್ತಿಯನ್ನು ರಕ್ಷಿಸಿಕೊಂಡೇ ವರದಿಯ ಜಾರಿಗೆ ಸರ್ಕಾರ ಮುಂದಾಗಿದೆ. ಇತರ ಆರು ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಜತೆ ಸಮಾಲೋಚನೆ ನಡೆಸಿ ವರದಿಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಶ್ಚಿಮ ಘಟ್ಟಗಳಲ್ಲಿನ ಜೀವವೈವಿಧ್ಯ ಹಾಗೂ ಅಳಿವಿನಂಚಿನಲ್ಲಿರುವ ಪ್ರಬೇಧಗಳ ಕುರಿತು ಅರಿವು ಮೂಡಿಸಲು ಶಾಲಾ ಹಂತದಿಂದ ಪದವಿ ಕಾಲೇಜುಗಳವರೆಗೆ ಪಠ್ಯಕ್ರಮದಲ್ಲಿ ಈ ವಿಷಯಗಳನ್ನು ಸೇರಿಸುವ ಅಗತ್ಯವಿದೆ. ವನ್ಯಜೀವಿ ಮತ್ತು ಪರಿಸರ ಕುರಿತು ಗ್ರಾಮ ಪಂಚಾಯಿತಿಗಳ ಹಂತದಿಂದ ಜಾಗೃತಿ ಅಭಿಯಾನಗಳನ್ನು ನಡೆಸಬೇಕಿದೆ ಎಂದರು.