ನವದೆಹಲಿ: ಮುಂದಿನ ವರ್ಷ ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಯೋಧ್ಯೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ 2024 ರ ಜನವರಿ 22 ರಂದು ರಾಮಲಲ್ಲಾ ವಿಗ್ರಹವನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.
ಪ್ರಧಾನಿ ಮೋದಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ದೇವಾಲಯವನ್ನು ಉದ್ಘಾಟನೆ ಮಾಡಲಾಗುವುದು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ರಾಮಲಲ್ಲಾ ಪ್ರತಿಷ್ಠಾಪನೆಗೆ ಒಂದು ವಾರ ಮುಂಚಿತವಾಗಿ ಪೂಜೆ ಪ್ರಾರಂಭವಾಗಲಿದೆ. ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಸರಣಿ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಾಣ ಪ್ರತಿಷ್ಠಾ ಮಹೋತ್ಸವ ನಿರ್ವಹಣಾ ಸಮಿತಿಯ ಹೊಣೆಗಾರಿಕೆ ಆರೆಸ್ಸೆಸ್ ಮುಖಂಡ ಭಯ್ಯಾ ಜೀ ಜೋಶಿ ಕೈಸೇರಲಿದೆ. ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಅಯೋಧ್ಯೆಯಲ್ಲಿಯೂ ವಿಶೇಷ ಸಿದ್ಧತೆಗಳು ನಡೆಯಲಿವೆ.
ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅನೇಕ ಪ್ರಸಿದ್ಧ ವ್ಯಕ್ತಿಗಳು ಮತ್ತು ಸಂತರು ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಇದಕ್ಕೂ ಮುನ್ನ ಇತ್ತೀಚೆಗಷ್ಟೇ ಸಿಎಂ ಯೋಗಿ ಸ್ಥಳಕ್ಕೆ ರಾಮಮಂದಿರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ್ದರು.
ಇದಕ್ಕೂ ಮುನ್ನವೇ ಮುಂದಿನ ವರ್ಷ ಲೋಕಸಭೆ ಚುನಾವಣೆಗೂ ಮುನ್ನವೇ ದೇಗುಲ ಉದ್ಘಾಟನೆಯಾಗಬಹುದು ಎಂಬ ವರದಿಗಳು ಬಂದಿದ್ದವು. ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.