ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ ಮತ್ತು ರೇಬೀಸ್ ರೋಗದ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೇಬೀಸ್ ರೋಗವು ಒಂದು ಮಾರಣಾಂತಿಕ ರೋಗವಾಗಿದ್ದು, ಈ ರೋಗದ ಹರಡುವಿಕೆ, ಚಿಕಿತ್ಸೆ ಮತ್ತು ಅದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ರೇಬೀಸ್ ರೋಗ ನಿಯಂತ್ರಣದ ಕುರಿತು ಮಾಹಿತಿ ತಲುಪಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮ ಮತ್ತು ಎಲ್ಲಾ ನಗರಗಳ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು. ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೂ ಕೂಡಾ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಬೀದಿ ನಾಯಿಗಳು ಮತ್ತು ಸಾಕು ನಾಯಿಗಳು ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆ ಬದಿಯಲ್ಲಿ ಮತ್ತು ಶಾಲೆಗಳ ಸಮೀಪ ಆಹಾರ ತ್ಯಾಜ್ಯಗಳ ಶೇಖರಣೆ ಕಂಡುಬಾರದಂತೆ ಸೂಕ್ತ ರೀತಿಯಲ್ಲಿ ಸ್ವಚ್ಛತೆ ಕೈಗೊಳ್ಳಬೇಕು. ಸಾಕು ನಾಯಿಗಳ ಮಾಲೀಕರು ಅವುಗಳಿಗೆ ರೇಬೀಸ್ ನಿರೋಧಕ ಲಸಿಕೆ ಕೊಡಿಸಬೇಕು. ಸಾರ್ವಜನಿಕರು ನಾಯಿ ಕಚ್ಚಿದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ. ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರೇಬೀಸ್ ನಿರೋಧಕ ಚುಚ್ಚುಮದ್ದು ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಇದ್ದು, ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 6224 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ರಾಕೇಶ ಬಂಗಲೆ ಮಾತನಾಡಿ, ಇಲಾಖೆ ವತಿಯಿಂದ ಬೀದಿ ನಾಯಿಗಳಿಗೆ ಸುರಕ್ಷಿತ ಸಂತಾನಹರಣ ಚಿಕಿತ್ಸೆ ಮತ್ತು ಲಸಿಕೆ ನೀಡಲು ಎಲ್ಲಾ ಸೌಲಭ್ಯಗಳಿದ್ದು, ರೇಬೀಸ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಆರೋಗ್ಯ ಇಲಾಖೆ, ಪಶುಪಾಲನಾ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.