ದಾಂಡೇಲಿ: ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯ ಪ್ರಗತಿ ಕುಂಠಿತವಿದ್ದು, ಸಾರ್ವಜನಿಕ ವಲಯದಿಂದ ಹೆಚ್ಚು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಕಾಮಗಾರಿ ಪೂರ್ಣಗೊಂಡು ಹಸ್ತಾಂತರಿಸುವ ಸಮಯದಲ್ಲಿ ಫಲಾನುಭವಿಗಳಿಂದ ಸಹಿ ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಖಂಡೂ ಹೇಳಿದರು.
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಜಲಜೀವನ ಮಿಷನ್, ಸ್ವಚ್ಚ ಭಾರತ ಮಿಷನ್ ಹಾಗೂ ನರೇಗಾ ಯೋಜನೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಅಧಿಕಾರಿಗಳು ಪೂರ್ಣಗೊಳಿಸಬೇಕು. ತಮ್ಮ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳು ಸರಿಯಾದ ಪ್ರತಿಕ್ರಿಯೆ ನೀಡದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದರು.
ಸ್ವಚ್ಚ ಭಾರತ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವೈಯಕ್ತಿಕ ಗೃಹ ಶೌಚಾಲಯದ ಕಾಮಗಾರಿ ಆದೇಶ ವಿತರಿಸಿ, ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಬೂದು ನೀರು ನಿರ್ವಹಣೆಗೆ ಸಂಬಂಧಿಸಿದ ಕಾಮಾಗಾರಿಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಅನುಷ್ಠಾನ ಇಲಾಖೆಗಳ ಕೊರತೆಯಿಂದಾಗಿ ಪ್ರಗತಿ ಕುಂಠಿತವಾಗಿದ್ದು, ಇದರಿಂದ ಕಡಿಮೆ ಮಾನವ ದಿನಗಳ ಸೃಜನೆಯಾಗುತ್ತಿವೆ. ಆದ್ದರಿಂದ ಉತ್ತಮ ಪ್ರಗತಿ ಸಾಧಿಸಲು ತಾಲೂಕು ಮಟ್ಟದ ಅಧಿಕಾರಿಗಳು ಸಂಬಂಧಿಸಿದ ಇಲಾಖೆಯೊಂದಿಗೆ ಸಭೆ ನಡೆಸಿ ಪ್ರಗತಿ ಹೆಚ್ಚಿಸುವಂತೆ ತಿಳಿಸಿದರು.
ಸಭೆಯಲ್ಲಿ 14, 15 ನೇ ಹಣಕಾಸು, ಗೃಹಲಕ್ಷೀ, ಅಮೃತ ಕಳಸ ಯಾತ್ರೆ, ಗ್ರಾಮ ಪಂಚಾಯತ ತೆರಿಗೆ, ಪಂಚತಂತ್ರ 2.0, ಗ್ರಂಥಾಲಯಗಳ ಪ್ರಗತಿ ಹಾಗೂ ವಸತಿ ಯೋಜನೆ ಕುರಿತು ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಆಡಳಿತ ಶಾಖೆಯ ಉಪಕಾರ್ಯದರ್ಶಿ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಡಿ. ಜಕ್ಕಪ್ಪಗೋಳ, ಮುಖ್ಯ ಲೆಕ್ಕಾಧಿಕಾರಿ ಸತೀಶ್ ಪವಾರ, ಮುಖ್ಯ ಯೋಜನಾಧಿಕಾರಿ ವಿನೋದ ಅನ್ವೇಕರ, ಯೋಜನಾ ನಿರ್ದೇಶಕ ಕರೀಂ ಅಸದಿ, ಎಲ್ಲ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.