ಕಾರವಾರ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥ ಪೂರ್ಣ ಮತ್ತು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಅಧಿಕಾರಿಗಳ ನೇತೃತ್ವದ ಉಪ ಸಮಿತಿಗಳನ್ನು ರಚಿಸಿದ ಅವರು, ಎಲ್ಲಾ ಉಪ ಸಮಿತಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸ್ವಾಗತ, ಮೆರವಣಿಗೆ, ಸ್ತಬ್ಧಚಿತ್ರ, ಧ್ಜಜಾರೋಹಣ, ವೇದಿಕೆ, ಪಥಸಂಚಲನ, ಸಾಂಸ್ಕೃತಿಕ, ಬಹುಮಾನ ವಿತರಣೆ, ಹೀಗೆ ವಿವಿಧ ಉಪ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪೊಲೀಸ್ ಪರೇಡ್ ಮೈದಾನದವರೆಗೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ಏರ್ಪಡಿಸುವುದು, ಮೆರವಣಿಗೆ ಸಂದರ್ಭದಲ್ಲಿ ಕೃಷಿ, ತೋಟಗಾರಿಕೆ, ಅರಣ್ಯ, ಮೀನುಗಾರಿಗೆ, ಬಂದರು ಇಲಾಖೆ ಮತ್ತು ನಗರಸಭೆ ವತಿಯಿಂದ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಮೆರವಣಿಗೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್, ಎನ್‌ಸಿಸಿ, ಗೃಹ ರಕ್ಷಕ ದಳ ಸೇರಿದಂತೆ ಎಲ್ಲರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಕಾರ್ಯಕ್ರಮದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಕೃಷಿ, ಸಾಹಿತ್ಯ, ಕಲೆ, ಸಂಸ್ಕೃತಿ, ಸಮಾಜಸೇವೆ, ಶಿಕ್ಷಣ, ಪರಿಸರ ಮತ್ತಿತರ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಕನ್ನಡ ರಾಜ್ಯೋತ್ಸವ ದಿನದಂದು ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ, ಸನ್ಮಾನಿಸಲಾಗವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮಾತನಾಡಿ, ಎಲ್ಲಾ ಉಪ ಸಮಿತಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸಿದ್ದತೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಬೇಕು ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕಿ ಸ್ಟೆಲಾ ವರ್ಗಿಸ್, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.