ಕಾರವಾರ: ವಿದ್ಯುತ್ ಮತ್ತು ರೈಲ್ವೆ ಖಾಸಗೀಕರಣ ವಿರೋಧಿಸಿ ಸಿಐಟಿಯು ಸಂಯೋಜಿತ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಆಯುಷ್ ಆಸ್ಪತ್ರೆ ವೃತ್ತದಿಂದ ಸವಿತಾ ಸರ್ಕಲ್ ಮಾರ್ಗವಾಗಿ ಹೆಸ್ಕಾಂ ಉಪವಿಭಾಗೀಯ ಕಚೇರಿಯೆದುರು ಸೇರಿದ ಪ್ರತಿಭಟನಾಕಾರರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈಲ್ವೆ ಕ್ಷೇತ್ರವನ್ನೂ ಖಾಸಗೀಕರಣ ಮಾಡಲು ಹೊರಟಿದೆ. ಖಾಸಗೀಕರಣದಿಂದ ರೈಲ್ವೆಗೆ ಅಪಾರ ಪ್ರಮಾಣದಲ್ಲಿ ನಷ್ಟವಾಗುತ್ತದೆ. ಸಿಬ್ಬಂದಿಗಳಿಗೆ ಸಮಸ್ಯೆಯಾಗುತ್ತದೆ. ದೇಶಕ್ಕೂ ಸಹ ವಿನಾಶಕಾರಿಯಾಗಲಿದೆ. ಆದ್ದರಿಂದ ಖಾಸಗೀಕರಣ ಕೈಬಿಡಬೇಕು ಎಂದು ಒತ್ತಾಯಿಸಿದರು.
ಕೇಂದ್ರದ ಮೋದಿ ಸರ್ಕಾರ ರೈತರ ಮರಣ ಶಾಸನವನ್ನು ಬರೆಯಲು ಹೊರಟಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಿದರೆ ಸಣ್ಣ ರೈತರು ನಾಶವಾಗಲಿದ್ದಾರೆ. ವಿದ್ಯುತ್‌ಅನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ-2022ನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಹೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಎಸ್.ಶೇಬಣ್ಣನವರ್ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು.
ಸಿಐಟಿಯುನ ಯಮುನಾ ಗಾಂವ್ಕರ, ಕರ್ನಾಟಕ ಪ್ರಾಂತ ರೈತ ಸಂಘದ ಶಾಂತಾರಾಮ ನಾಯಕ, ತಿಲಕ ಗೌಡ ಸೇರಿದಂತೆ ಅನೇಕರು ಇದ್ದರು.