ಅಂಕೋಲಾ: ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಕಾರವಾರ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕುಮಟಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಈಶ್ವರ ಕಂಡೂ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಎಸ್. ಎಸ್. ಎಲ್. ಸಿ ಅತ್ಯಂತ ಮಹತ್ವದ ಹಂತವಾಗಿದ್ಧು ವಿದ್ಯಾರ್ಥಿಗಳ ಕಡೆ ಹೆಚ್ಚಿನ ಗಮನ ನೀಡಿ ಶೈಕ್ಷಣಿಕ ಪ್ರಗತಿಗೆ ಪ್ರತ್ಯೇಕ ಯೋಜನೆ ರೂಪಿಸಬೇಕು. ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಭೇಟಿಯಾಗಿ ಅವರ ಸಮಸ್ಯೆಗಳನ್ನು ಅರಿತು ಅವರಿಗೆ ಮಾರ್ಗದರ್ಶನ ಮಾಡಬೇಕು ಎಂದ ಅವರು ಶಾಲೆಯಲ್ಲಿ ಪಾಲಕರ ಮತ್ತು ತಾಯಂದಿರ ಸಭೆ ನಡೆಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತು ಚರ್ಚಿಸಬೇಕು ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಹೆಚ್ಚಿನ ಫಲಿತಾಂಶ ತಂದುಕೊಡಲು ಎಲ್ಲಾ ಅಧಿಕಾರಿಗಳು, ಮುಖ್ಯ ಶಿಕ್ಷಕರು, ಶಿಕ್ಷಕರು ಶ್ರಮ ವಹಿಸಬೇಕು ಎಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಡಯಟ್ ಉಪನಿರ್ದೇಶಕ ಎನ್.ಜಿ.ನಾಯಕ ಮಾತನಾಡಿ ಎಸ್. ಎಸ್. ಎಲ್. ಸಿ ಫಲಿತಾಂಶ ಹೆಚ್ಚಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಶೈಕ್ಷಣಿಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದರು. ಡಿ.ಡಿ.ಪಿ.ಐ ಲತಾ ನಾಯಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ಶಿಕ್ಷಕ ಜಿ.ಆರ್. ತಾಂಡೇಲ್ ಕಾರ್ಯಕ್ರಮ ನಿರ್ವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್ ವಂದಿಸಿದರು.