ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆಗೊಂಡಿದ್ದಾರೆ.
ನ.10, ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಅವರು ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ, ನಳೀನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಭಾರೀ ಕುತೂಹಲಗಳಿದ್ದವು. ಲಿಂಗಾಯತ ಸಮುದಾಯ ಪಕ್ಷಕ್ಕೆ ನೀಡಿದ ಬೆಂಬಲವನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ, ಯುವ ಮೋರ್ಚಾದಲ್ಲಿಯೂ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದ್ದ ವಿಜಯೇಂದ್ರ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ಆದೇಶದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿ.ವೈ ವಿಜಯೇಂದ್ರ, ‘ರಾಜ್ಯಾಧ್ಯಕ್ಷ ಸ್ಥಾನದಂಥ ದೊಡ್ಡ ಹುದ್ದೆ ಸಿಕ್ಕಿದೆ. ನನಗೆ ಬಿಜೆಪಿ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಈ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಲಿದ್ದೇನೆ’ ಎಂದು ಹೇಳಿದ್ದಾರೆ.
‘ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ’ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.