Slide
Slide
Slide
previous arrow
next arrow

ಮತ್ಸ್ಯವಾಹಿನಿಗೆ ಸಿಎಂ ಚಾಲನೆ; ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಬದ್ಧ: ಸಿದ್ದರಾಮಯ್ಯ

300x250 AD

ಬೆಂಗಳೂರು: ಮೀನುಗಾರ ಸಮುದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು. ಮೀನುಗಾರ ಮಹಿಳೆಯರಿಗೆ ನೀಡುವ ಸಹಾಯಧನವನ್ನು ಪುರುಷರಿಗೂ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ. ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ ಎಂದು ಆರೋಪಿಸಿದರು.

ರಿಯಾಯ್ತಿ ದರದಲ್ಲಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ಸಿಎಂ ಮಾಹಿತಿ ನೀಡಿದರು.

300x250 AD

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಸ್ವಾಗತ ಭಾಷಣ ಮಾಡಿ, ಮೀನುಗಾರರ ಎಲ್ಲ ಸಮಸ್ಯೆಗಳ ಪರಿಹಾರಕ್ಕೆ ನಮ್ಮ ಸರಕಾರ ಬದ್ಧವಿದೆ ಎಂದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಇದ್ದರು.

ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಕ್ಕೆ ಚಾಲನೆ:

ವಿಶ್ವ ಮೀನುಗಾರಿಕೆ ದಿನಾಚರಣೆಯ ಪ್ರಯುಕ್ತ ಮೀನುಗಾರಿಕೆ ಇಲಾಖೆಯ ವತಿಯಿಂದ ವಿಧಾನಸೌಧದ ಭವ್ಯ ಮೆಟ್ಟಿಲು ಬಳಿ ಹಮ್ಮಿಕೊಂಡಿದ ಮತ್ಸ್ಯ ವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಫಲಾನುಭವಿಗಳಿಗೆ 300 ಮತ್ಸ್ಯವಾಹಿನಿ ತ್ರಿಚಕ್ರ ವಾಹನ ನೀಡಲು ಸರ್ಕಾರ ಮುಂದಾಗಿದ್ದು, ಈ ಪೈಕಿ ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 150 ಮತ್ರ್ಯ ವಾಹಿನಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಉಳಿದಂತೆ ಹಂತ ಹಂತವಾಗಿ ಮತ್ಸ್ಯವಾಹಿನಿಯನ್ನು ವಿತರಿಸಲಾಗುವುದು. ಮತ್ಸ್ಯವಾಹಿನಿ ಮೂಲಕ ತಾಜಾ ಮೀನುಗಳನ್ನು ಮಾರಾಟ ಮಾಡಲಾಗುವುದು.

Share This
300x250 AD
300x250 AD
300x250 AD
Back to top