ಬೆಂಗಳೂರು: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ 5 ಕೋಟಿ ರೂಪಾಯಿ ಪಡೆದು ವಂಚಿಸಿದ ಪ್ರಕರಣ ಸಂಬAಧ ಬಂಧನಕ್ಕೊಳಗಾಗಿರುವ ಬಲಪಂಥೀಯ ಕಾರ್ಯಕರ್ತೆ ಚೈತ್ರಾ ಹಾಗೂ ಮತ್ತೊಬ್ಬ ಆರೋಪಿ ಶ್ರೀಕಾಂತ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಈ ಇಬ್ಬರಿಗೆ ಜಾಮೀನು ನೀಡಿದೆ. ಪರಪ್ಪನ ಅಗ್ರಹಾರ ಕಾರಾಗೃಹದಿಂದ ಚೈತ್ರಾ ಹಾಗೂ ಶ್ರೀಕಾಂತ್ ಬಿಡುಗಡೆಯಾಗಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿ ಅವರಿಗೆ ಭರವಸೆ ನೀಡಿ, ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೈತ್ರಾ ಮತ್ತು ಇತರ ಎಂಟು ಮಂದಿಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.
ವಂಚನೆ ಸಂಬಂಧ ಉದ್ಯಮಿ ಗೋವಿಂದಬಾಬು ಪೂಜಾರಿ ಸೆ.8ರಂದು ಬಂಡೇಪಾಳ್ಯ ಠಾಣೆಯಲ್ಲಿ ಚೈತ್ರಾ ಮತ್ತು ಇತರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಹೆಚ್ಚಿನ ತನಿಖೆಗಾಗಿ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿತ್ತು. ಬಳಿಕ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ, ಗಗನ್ ಕಡೂರು, ಹೊಸಪೇಟೆಯ ಸ್ವಾಮೀಜಿ ಹಾಲಶ್ರೀ, ಚನ್ನನಾಯ್ಕ, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಸೇರಿ 8 ಮಂದಿಯನ್ನು ಬಂಧಿಸಲಾಗಿತ್ತು.