ಅಂಕೋಲಾ: ರಾಜ್ಯ ಸರ್ಕಾರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪರಿಣಿತರ ಸಲಹೆ ಸೂಚನೆಗಳನ್ನು ಪಡೆಯದೇ ಮನಸ್ಸಿಗೆ ಬಂದ ಹಾಗೆ ಪಠ್ಯ ಪುಸ್ತಕಗಳ ಪರಿಷ್ಕರಣೆ ನಡೆಸಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡಿದ್ದು ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಪ್ರಯೋಗಶಾಲೆ ಮಾಡಲು ಹೊರಟ ರಾಜ್ಯ ಸರ್ಕಾರದ ಧೋರಣೆ ಖಂಡನೀಯ ಎಂದು ಮಾಜಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಅವರು ಹೇಳಿದರು.
ತಾಲೂಕಿನ ಹಿಮಾಲಯ ಶಿಕ್ಷಣ ಸಂಸ್ಥೆಯ ಪದವಿಪೂರ್ವ ವಿಭಾಗದ ಸಭಾಭವನದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮುಂದುವರಿಸುವಂತೆ ಸಹಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಜಗತ್ತಿನ ವೇಗಕ್ಕೆ ತಕ್ಕ ಹಾಗೆ ತಮ್ಮ ವ್ಯಕ್ತಿತ್ವ ಮತ್ತು ಸಾಮರ್ಥ್ಯ ಹೆಚ್ಚಿಸುವ ಶಿಕ್ಷಣ ರಾಷ್ಟ್ರೀಯ ಶಿಕ್ಷಣ ನೀತಿ ಹೊಂದಿದ್ದು ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ರಾಜ್ಯ ಸರ್ಕಾರ ಅನ್ಯಾಯ ಎಸಗಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡುವುದನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಯಾರ ಅನುಮೋದನೆ ಪಡೆಯದೇ ಯಾರೊಂದಿಗೂ ಚರ್ಚೆ ನಡೆಸದೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಯನ್ನು ಜಾರಿಗೆ ತಂದಿದೆ ಇದನ್ನು ಖಂಡಿಸಿ ಶಿಕ್ಷಣ ಪ್ರೇಮಿಗಳು, ತಜ್ಞರು ಒಂದಾಗಿ ಜನರ ಬಳಿ ತೆರಳಿ ಜನಾಭಿಪ್ರಾಯವನ್ನು ಸಂಗ್ರಹಿಸುವ ಕೆಲಸ ಮಾಡುತ್ತಿದ್ದು ಅದರ ಭಾಗವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಮುಂದುವರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದೇವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ, ಜಿ.ಪಂ ಮಾಜಿ ಸದಸ್ಯ ಜಗದೀಶ ನಾಯಕ, ಕಾಲೇಜಿನ ಪ್ರಾಚಾರ್ಯರುಗಳಾದ ಮಾರುತಿ ಮಹಾಲೆ, ಸವಿತಾ. ಕೆ ಉಪಸ್ಥಿತರಿದ್ದರು.