ನವದೆಹಲಿ: 2001ರಲ್ಲಿ ಸಂಸತ್ತಿನ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.
ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಹಾಗೂ ಖರ್ಗೆ ಕೂಡ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು. ಪ್ರಧಾನಿ ಮೋದಿ, ಅಮಿತ್ ಶಾ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎಲ್ಲಾ ನಾಯಕರು ಸಂಸತ್ ಆವರಣದಲ್ಲಿ ಒಂದು ನಿಮಿಷ ಮೌನ ಆಚರಿಸಿದರು.
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆಗಳ ಭಯೋತ್ಪಾದಕರು ಡಿಸೆಂಬರ್ 13, 2001 ರಂದು ಸಂಸತ್ತಿನ ಸಂಕೀರ್ಣದ ಮೇಲೆ ದಾಳಿ ಮಾಡಿ ಒಂಬತ್ತು ಜನರನ್ನು ಕೊಂದಿದ್ದರು. ನಂತರದಲ್ಲಿ ಎಲ್ಲಾ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸಂಹರಿಸಿವೆ.
ಸೈನಿಕರನ್ನು ಸ್ಮರಿಸುತ್ತಾ ಭಯೋತ್ಪಾದನೆಯನ್ನು ತೊಡೆದುಹಾಕುವ ಪ್ರತಿಜ್ಞೆಯನ್ನು ಪುನರುಚ್ಚರಿಸಲು ರಾಷ್ಟ್ರಪತಿ ಮುರ್ಮು ಈ ಸಂದರ್ಭದಲ್ಲಿ ಕರೆ ನೀಡಿದರು.
“22 ವರ್ಷಗಳ ಹಿಂದೆ ಈ ದಿನದಂದು, ದೇಶದ ರಾಜಕೀಯ ನಾಯಕತ್ವದ ಉನ್ನತ ಶ್ರೇಣಿಯನ್ನು ಕೆಡವಲು ಮತ್ತು ನಮ್ಮ ಪ್ರಜಾಪ್ರಭುತ್ವದ ದೇವಾಲಯಕ್ಕೆ ಹಾನಿ ಮಾಡಲು ಭಯೋತ್ಪಾದಕರ ನಡೆಸಿದ ದುಷ್ಕೃತ್ಯವನ್ನು ತಡೆದು ಮಾತೃಭೂಮಿಗಾಗಿ ಒಂಬತ್ತು ಮಂದಿ ಕೆಚ್ಚೆದೆಯ ವೀರರು ತಮ್ಮ ಪ್ರಾಣವನ್ನು ಅರ್ಪಿಸಿದರು. ಅವರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಭಯೋತ್ಪಾದನೆಯನ್ನು ತೊಡೆದುಹಾಕಲು ನಾವು ಇಂದು ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸುತ್ತೇವೆ” ಎಂದು ಅವರು ಹೇಳಿದರು.