ಜೋಯಿಡಾ : ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಸ್ಸುಳ್ಳಿ ಗ್ರಾಮದ ಗವಳಾದೇವಿ ದೇವಸ್ಥಾನದ ಆವರಣದಲ್ಲಿ ಡಿ: 19 ರಂದು ಬೆಳಿಗ್ಗೆ 10 ಘಂಟೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರು ಹೇಳಿದರು.
ಅವರು ಗುರುವಾರ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾಲೂಕಿನ ಜನತೆ ತಮ್ಮ ತಮ್ಮ ಊರಿನ ಹಾಗೂ ಗ್ರಾಮಗಳ ಮೂಲ ಸೌಕರ್ಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸುವ ದೃಷ್ಟಿಯಿಂದ ಪೋಲಿಸ್ ಇಲಾಖೆ ಬಂದೋಬಸ್ತ್ ಮಾಡಿಕೊಳ್ಳಬೇಕು. ಗವಳಾದೇವಿಗೆ ಹೋಗಲು ರಸ್ತೆ ಸರಿಯಿಲ್ಲದ ಕಾರಣ ರಸ್ತೆ ಸರಿಪಡಿಸಬೇಕು. ಜನರ ಸಮಸ್ಯೆ ಆಲಿಸಿ, ಅದಕ್ಕೆ ಸ್ಪಂದಿಸುವ ದೃಷ್ಟಿಯಿಂದಲೇ ಕುಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜೋಯಿಡಾ ತಹಶೀಲ್ದಾರ್ ಮಂಜುನಾಥ ಎಮ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ, ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ದೀಪಕ್ ನಾಯಕ, ಜೋಯಿಡಾ ಪಿ.ಎಸ್.ಐ ಮಹೇಶ್ ಮಾಳಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.