ಶಿರಸಿ: ಎಲ್ಲಾ ವರ್ಷಕ್ಕಿಂತ ಈ ವರ್ಷ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆದ್ದರಿಂದ ಬಂದ ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಿರಸಿ ನಗರದ ತಾಲೂಕಾಡಳಿತ ಸೌಧದಲ್ಲಿ ಮಂಗಳವಾರ ಆಯೋಜಿಸಿದ್ದ ಮಾರಿಕಾಂಬಾ ದೇವಿಯ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆ ರಾಜ್ಯದ ಅತಿದೊಡ್ಡ ಜಾತ್ರೆ. ಲಕ್ಷಾಂತರ ಜನ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಬಂದ ಭಕ್ತಾದಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶಿರಸಿ ನಗರಸಭೆಯವರು ಜಾತ್ರಾ ಸಮಯದಲ್ಲಿ ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನಹರಿಸಿ ಎಲ್ಲಿಯೂ ಕಸಿದ ರಾಶಿಗಳು ಬೀಳದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಜಾತ್ರೆಗೆ ಬರಲು ಭಕ್ತಾದಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣಗೊಂಡ ಮಾರಿಕಾಂಬಾ ದೇವಸ್ಥಾನದ ವಸತಿಗೃಹದ ಸಮಸ್ಯೆಯನ್ನು ಶೀಘ್ರ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ , ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ಶಿರಸಿ ಸಹಾಯಕ ಆಯುಕ್ತೆ ಅಪರ್ಣ ರಮೇಶ, ತಹಸೀಲ್ದಾರ್ ಶ್ರೀಧರ ಮುಂದಲಿಮನಿ, ಶಿರಸಿ ನಗರಸಭೆ ಪೌರಾಯುಕ್ತ ಕಾಂತರಾಜ್ ಹಾಗೂ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು.ದಂಡ ಹಾಕುವುದೇ ಪೊಲೀಸರ ಉದ್ದೇಶವಾಗಬಾರದು.ಇಂದಿನಿಂದಲೇ ಜಿಲ್ಲಾದ್ಯಂತ ಈ ಕ್ರಮ ಜಾರಿಗೊಳ್ಳಲಿದೆ.– ಮಂಕಾಳು ವೈದ್ಯ ಜಿಲ್ಲಾ ಉಸ್ತುವಾರಿ ಸಚಿವ.