ಕಾರವಾರ: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ವರ್ಷದಂತೆ ಈ ಬಾರಿಯೂ ಜ.26 ರಂದು ಪೊಲೀಸ್ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೇರವೇರಿಸಲಿದ್ದಾರೆ ಎಂದರು. ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಅಚ್ಚುಕಟ್ಟಾಗಿ ಆಯೋಜಿಸಲು ಸೂಚಿಸಿದ ಅವರು, ಪೊಲೀಸ್, ಅರಣ್ಯ, ಕರಾವಳಿ ಕಾವಲು ಪೊಲೀಸ್ ಮತ್ತು ಕರಾವಳಿ ನಿಯಂತ್ರಣದಳ, ಗೃಹ ರಕ್ಷಕ ದಳ, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ ಪಥಸಂಚಲನ ನಡೆಯಲಿದೆ. ನಂತರ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಿದ್ದಪಡಿಸಿ, ಜನಪ್ರತಿನಿಧಿಗಳನ್ನು, ಗಣ್ಯರನ್ನು ಆಹ್ವಾನಿಸಬೇಕು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಕಾರ್ಯಕ್ರಮದ ಯಶಸ್ವಿಗೆ ವಿವಿಧ ಉಪ ಸಮಿತಿ ರಚಿಸಲಾಗಿದ್ದು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ತಹಶೀಲ್ದಾರ ನಿಶ್ಚಲ್ ನರೋನಾ, ಪೌರಾಯುಕ್ತ ಚಂದ್ರಮೌಳಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.