ಕಾರವಾರ: ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗ ಜಾರಿಗೆ ತರಲು ವಿಳಂಬವಾಗಿದೆ. ನೌಕರರಿಗೆ ತೊಂದರೆ ಅಗುತ್ತಿದೆ ಎಂದು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಕಾರವಾರ ಶಾಸಕ ಸತೀಶ ಸೈಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರಿ ನೌಕರರಿಗೆ ೭ನೇ ವೇತನ ಆಯೋಗದ ಸೌಲಭ್ಯಗಳನ್ನು ಜಾರಿಗೊಳಿಸಲು 19-11-2022 ರಂದು ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ೭ನೇ ವೇತನ ಆಯೋಗವನ್ನು ರಚಿಸಿ, 2 ಬಾರಿ ವೇತನ ಆಯೋಗದ ಅವಧಿಯನ್ನು ವಿಸ್ತರಿಸುವ ಮೂಲಕ 13ತಿಂಗಳಾದರೂ ಸಮಿತಿ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಿರುವುದಿಲ್ಲ. ಹಿಂದೆ ಸಿದ್ದರಾಮಯ್ಯ 6ನೇ ವೇತನ ಆಯೋಗವನ್ನು ರಚಿಸಿ, 8 ತಿಂಗಳ ಒಳಗೆ ಅಲ್ಪಾವಧಿ ವರದಿಯನ್ನು ಆಯೋಗದಿಂದ ಪಡೆದು ವಿಳಂಬವಿಲ್ಲದೇ ಜಾರಿಗೆ ಮಾಡಿದ್ದರು. ಆದರೆ 7ನೇ ವೇತನ ಆಯೋಗದ ಅವಧಿಯನ್ನು 2 ಬಾರಿ ವಿಸ್ತರಿಸಿರುವುದರಿಂದ ಸಹಜವಾಗಿಯೇ ರಾಜ್ಯ ಸರ್ಕಾರಿ ನೌಕರರಲ್ಲಿ ವೇತನ ಆಯೋಗದ ಜಾರಿಯ ಬಗ್ಗೆ ಅನಿಶ್ಚಿತತೆ ಉಂಟಾಗಿರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಹಳೇ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಸಂಬಂಧ 1-3-2023 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು ಈವರೆಗೂ ಸರ್ಕಾರಕ್ಕೆ ಯಾವುದೇ ರೀತಿಯ ವರದಿ ಸಲ್ಲಿಸದೇ ಇರುವುದು ಹಾಗೂ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಇದುವರೆವಿಗೂ ಓಪಿಎಸ್ ಚಾರಿಗೊಳಿಸದೇ ಇರುವುದು ರಾಜ್ಯದ ಸುಮಾರು 3 ಲಕ್ಷ ನೌಕರರಲ್ಲಿ ಆತಂಕವನ್ನು ಮೂಡಿಸಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆಗೆ ನೌಕರರು ಮಾಸಿಕ ವಂತಿಗೆ ನೀಡುವ ಮೂಲಕ ರಾಜ್ಯ ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆ.ಎ.ಎಸ್.ಎಸ್)ಯ ಆದೇಶವನ್ನು 5-9-2022ರಂದು ಹೊರಡಿಸಲಾಗಿದ್ದು, ಈ ಯೋಜನೆಯೂ ಅನುಷ್ಠಾನಗೊಂಡಿಲ್ಲ ಎಂದು ತಿಳಿಸಿದರು. ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಆಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತೊಂದರೆಯಗಿದೆ. ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ ಎಂದರು.
ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರವು ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರವಾಗಿ ವರದಿಯನ್ನು ಪಡೆದು, ಸರ್ಕಾರ ಈಗಾಗಲೇ ನೀಡಿರುವ ಶೇ. 17 ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ. 40 ಫಿಟ್ ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ 1-7-2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು. ಹಳೆ ಪಿಂಚಣೆ ಯೋಜನೆಯನ್ನು ಮರು ನಾರಿಗೊಳಿಸಬೇಕು. ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓಪಿ.ಎಸ್. ವ್ಯಾಪ್ತಿಗೆ ತರಬೇಕು. ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.