Slide
Slide
Slide
previous arrow
next arrow

ಮತದಾರರು ಆಸೆ ಆಮಿಷಕ್ಕೆ ಬಲಿಯಾಗದೆ ಮತದಾನ ಹಕ್ಕು ಚಲಾಯಿಸಿ; ರೇಣುಕಾ ರಾಯ್ಕರ್

300x250 AD

ಕಾರವಾರ: ಮತದಾರರು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ತಮ್ಮ ಮತದಾನ ಹಕ್ಕು ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿದ್ದ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮತದಾರರು ಜವಾಬ್ದಾರಿ ಅರಿತು ಮತದಾನ ಮಾಡದೇ ಇದ್ದಲ್ಲಿ ಉತ್ತಮ ಜನಪ್ರತಿನಿಧಿಯ ಆಯ್ಕೆ ಸಾಧ್ಯವಿಲ್ಲ. ಪ್ರತಿ ಮತಕ್ಕೂ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ಇದೆ. ಒಂದು ಮತ ಒಬ್ಬ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧರಿಸಲಿದೆ. ಮತದಾರರು ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಯೋಚಿಸಿ ಚಲಾಯಿಸಬೇಕು. ಯುವ ಜನತೆ ಹೆಚ್ಚು ಜಾಗೃತರಾಗಿ, ತಪ್ಪದೆ ಮತದಾನ ಮಾಡಬೇಕು ಹಾಗೂ ಜಿಲ್ಲೆಯಾದ್ಯಂತ ಮತದಾನದ ಮಹತ್ವ ಕುರಿತಂತೆ ಹೆಚ್ಚಿನ ಅರಿವು ಕಾರ್ಯಕ್ರಮಗಳು ನಡೆಯಬೇಕು ಎಂದರು. ಜಿಲ್ಲೆಯಲ್ಲಿ ಯುವ ಮತದಾರರನ್ನು ಆಕರ್ಷಿಸಿ, ಪ್ರಜಾಪ್ರಭುತ್ವದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನಗರ ವ್ಯಾಪ್ತಿಯಲ್ಲಿ ಸ್ವಚ್ಚತಾ ವಾಹನಗಳಲ್ಲಿ ಜಿಂಗಲ್ ಮೂಲಕ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ, ಇದೇ ರೀತಿ ಜಿಲ್ಲೆಯ ಪ್ರತಿಯೊಂದು ಗ್ರಾಮಮಟ್ಟದಲ್ಲಿಯೂ ಜಾಗೃತಿ ಮೂಡಿಸುವುದರ ಜೊತೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಾಗೂ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.90 ರಷ್ಟು ಮತದಾನ ಆಗವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಈ ಬಾರಿಯ ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸಂಖ್ಯೆ ಅಧಿಕವಾಗುದ್ದು ಎಲ್ಲಾ ಯುವ ಮತದಾರರೂ ತಮ್ಮ ಹಕ್ಕು ಚಲಾಯಿಸುವ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ, ಯಾವುದೇ ಮತದಾರರು ಬಿಟ್ಟು ಹೋಗದಂತೆ 18 ವರ್ಷ ಮೇಲ್ಪಟ್ಟ ಪ್ರತಿಯೊಂದು ಮತದಾರರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಧ್ಯೇಯದೊಂದಿಗೆ ವಿನೂತನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು. ಜಿಲ್ಲೆಯ ಎಲ್ಲಾ ಮತದಾರರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರೀಕ್ಷಿಸಿ ಖಚಿತಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳದ ಮತದಾರರು ತಮ್ಮ ಹೆಸರು ಸೇರಿಸಿಕೊಳ್ಳಲು ಇನ್ನು ಅವಕಾಶ ಇದೆ, ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಫೆಬ್ರವರಿ ಅಂತ್ಯದವರೆಗೂ ಅವಕಾಶ ಇದೆ. ಎಲ್ಲಾರೂ ತಪ್ಪದೆ ಮತದಾನ ಮಾಡುವ ಮೂಲಕ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ 18 ವರ್ಷ ಮೇಲ್ಪಟ್ಟಯುವ ಮತದಾರರಿಗೆ ಸಾಂಕೇತಿಕವಾಗಿ ಚುನಾವಣಾ ಗುರುತಿನ ಚೀಟಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಚ್.ಎಚ್.ಕುಕನೂರ್ ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top