ದಾಂಡೇಲಿ: ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಡಿ ಮಗಳನ್ನು ಉಳಿಸಿ ಮಗಳನ್ನು ಓದಿಸಿ ಎಂಬ ಭೇಟಿ ಬಚಾವೋ ಭೇಟಿ ಪಡಾವೋ ಅಭಿಯಾನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆಯನ್ನು ನೀಡಲಾಯಿತು.
ತಹಶೀಲ್ದಾರ್ ಶೈಲೇಶ್ ಪರಮಾನಂದ ಚಾಲನೆಯನ್ನು ನೀಡಿ ಮಾತನಾಡುತ್ತಾ, ದೇಶದಲ್ಲಿ ಲಿಂಗ ತಾರತಮ್ಯ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಇರುವಂತಹ ಕಳವಳವನ್ನು ಪರಿಹರಿಸಲು ಪರಿಚಯಿಸಲ್ಪಟ್ಟ ಕಾರ್ಯಕ್ತಮವೆ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮವಾಗಿದೆ. ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವಿಗೆ ಶಿಕ್ಷಣ ನೀಡಿ. ಯೋಜನೆಯು ಲಿಂಗ ಪಕ್ಷಪಾತದ ವಿರುದ್ಧ ನಾಗರಿಕರಿಗೆ ಶಿಕ್ಷಣ ನೀಡಲು ಮತ್ತು ಹೆಣ್ಣುಮಕ್ಕಳ ಕಲ್ಯಾಣ ಸೇವೆಗಳನ್ನು ಪರಿಣಾಮಕಾರಿಯಾಗಿ ಸುಧಾರಿಸುವ ಗುರಿಯನ್ನು ಹೊಂದಿದೆ. ಹೆಣ್ಣು ಮಕ್ಕಳನ್ನು ಗೌರವಿಸುವ ಮತ್ತು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯು ಮಕ್ಕಳ ಲಿಂಗ ಅನುಪಾತವನ್ನು ಸುಧಾರಿಸುವುದು, ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣವನ್ನು ಖಚಿತಪಡಿಸಿಕೊಳ್ಳುವುದು, ಲಿಂಗ-ಪಕ್ಷಪಾತ, ಲಿಂಗ-ಆಯ್ದ ನಿರ್ಮೂಲನೆಯನ್ನು ತಡೆಗಟ್ಟುವುದು, ಹೆಣ್ಣು ಮಗುವಿನ ಬದುಕುಳಿಯುವಿಕೆ ಮತ್ತು ರಕ್ಷಣೆಯನ್ನು ಖಚಿತಪಡಿಸುವುದು ಹಾಗೂ ಹೆಣ್ಣು ಮಗುವಿನ ಶಿಕ್ಷಣ ಮತ್ತು ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಹಾಲಮನ್ನವರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಅಶೋಕ್ ಪವಾರ್, ಪಿಎಸ್ಐ ಐ.ಆರ್.ಗಡ್ಡೇಕರ್, ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ತಾಲ್ಲೂಕಾಡಳಿತ ಸೌಧದ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ನಗರಸಭೆಯ ಆವರಣದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶಾಹಿದಾ ಪಠಾಣ್, ನಗರ ಸಭೆಯ ಸದಸ್ಯರುಗಳು, ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.