ಸಿದ್ದಾಪುರ: ವಿವೇಕ ಶಾಲೆ ಯೋಜನೆಯಡಿಯಲ್ಲಿ ನಿರ್ಮಿಸಲಾದ ಪಟ್ಟಣದ ಬಾಲಿಕೊಪ್ಪ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಂಗಳವಾರ ಚಾಲನೆ ನೀಡಿದರು. ನಂತರ ಮಾತನಾಡಿ, ಬಾಲಿಕೊಪ್ಪ ಸರ್ಕಾರಿ ಶಾಲೆ ಖಾಸಗಿ ಶಾಲೆಗಿಂತ ಹೆಚ್ಚಿನ ಮಕ್ಕಳನ್ನು ಹೊಂದಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾಗಿದೆ. ಶಿಕ್ಷಣದ ಜತೆಗೆ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕಿದೆ. ಶಾಲೆಗೆ ಬೇಕಾದ ಹೆಚ್ಚುವರಿ ಸೌಲಭ್ಯವನ್ನು ಕೊಡಿಸಲು ಸಿದ್ದನಿದ್ದೇನೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ ನಾಯ್ಕ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ, ಕಾರ್ಯದರ್ಶಿ ಗುರುರಾಜ ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಸುಜಾತಾ ಶಾನಭಾಗ ಉಪಸ್ಥಿತರಿದ್ದರು. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕನ್ನೇಶ್ ನಾಯ್ಕ ಸ್ವಾಗತಿಸಿ-ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಸಂತೋಷ ಅಳ್ವೇಕೋಡಿ ನಿರೂಪಿಸಿದರು.