Slide
Slide
Slide
previous arrow
next arrow

ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ: ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಲು ಡಿಸಿ ಸೂಚನೆ

300x250 AD

ಕಾರವಾರ: ಜಿಲ್ಲೆಗೆ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಮಾರ್ಚ್ 1 ರಿಂದ 4 ರ ವರೆಗೆ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಪ ಲೋಕಾಯುಕ್ತರು ತಮ್ಮ ಭೇಟಿಯ ಸಂದರ್ಭದಲ್ಲಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಲಿದ್ದು, ಎಲ್ಲಾ ಇಲಾಖೆಗಳಲ್ಲಿ ಕಡ್ಡಾಯವಾಗಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ಕಚೇರಿಗಳ ಮುಂಭಾಗದಲ್ಲಿ ಉಪ ಲೋಕಾಯುಕ್ತರ ಭೇಟಿ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯುವಂತೆ ಬ್ಯಾನರ್‌ಗಳನ್ನು ಅಳವಡಿಸುವಂತೆ ಸೂಚಿಸಿದರು.
ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತಂತೆ ಎಲ್ಲಾ ಅಗತ್ಯ ಮಾಹಿತಿಯನ್ನು ಸಿದ್ದವಾಗಿಟ್ಟುಕೊಂಡು ವಿಚಾರಣೆ ಸಂದರ್ಭದಲ್ಲಿ ಹಾಜರುಪಡಿಸುವಂತೆ ತಿಳಿಸಿದರು. ಹಾಸ್ಟೆಲ್‌ಗಳು , ಜಿಲ್ಲಾ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳು, ಶಾಲಾ ಕಾಲೇಜುಗಳಲ್ಲಿ ಸ್ಚಚ್ಚತೆ ಕಾಪಾಡುವ ಜೊತೆಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಕಂಡುಬರದಂತೆ ಸಿದ್ದತೆಗಳನ್ನು ಕೈಗೊಳ್ಳಬೇಕು. ಹಾಗೂ ಸಂಬಂಧಪಟ್ಟ ಎಲ್ಲಾ ದಾಸ್ತಾನು ರಿಜಿಸ್ಟರ್ ಗಳು ಹಾಗೂ ಕಡತಗಳನ್ನು ಮತ್ತು ಸಂಬಂಧಪಟ್ಟ ವಿಷಯ ನಿರ್ವಾಹಕರು ಹಾಗೂ ಎಲ್ಲಾ ಸಿಬ್ಬಂದಿಗಳು ಕಚೇರಿಯ ಕರ್ತವ್ಯಕ್ಕೆ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದರು.

ಮಾರ್ಚ್ 2 ರಂದು ಮಾನ್ಯ ಉಪ ಲೋಕಾಯುಕ್ತರು, ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ರ ವರೆಗೆ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರಿಂದ ದೂರುಗಳ ಸ್ವೀಕಾರ ಮತ್ತು ಅವುಗಳ ವಿಚಾರಣೆ ನಡೆಸಲಿದ್ದಾರೆ. ಮಾರ್ಚ್ 3 ರಂದು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 4 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ ಎಂದರು.

300x250 AD

ಮಾನ್ಯ ಉಪ ಲೋಕಾಯುಕ್ತರ ಭೇಟಿ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಸಾರ್ವಜನಿಕರಿಂದ ಲೋಕಯುಕ್ತಕ್ಕೆ ಸಲ್ಲಿಕೆಯಾಗುವ ದೂರುಗಳ ಕುರಿತು ನಡೆಯುವ ವಿಚಾರಣಾ ಸಂದರ್ಭದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಚಾರಣಾ ಪ್ರಕ್ರಿಯೆ ನಡೆಸಲು ಅಗತ್ಯವಿರುವ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಹಾಗೂ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top