ಬನವಾಸಿ: ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಪಟ್ಟಣದ ಹೆಸ್ಕಾಂ ಕಚೇರಿಯ ಮುಂದೆ ಸುತ್ತಮುತ್ತಲಿನ ರೈತರು ಬುಧವಾರ ಪ್ರತಿಭಟನೆ ನಡೆಸಿ, ಹೆಸ್ಕಾಂ ಶಿರಸಿ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ನಾಗರಾಜ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಸರ್ಕಾರ ಮತ್ತು ಹೆಸ್ಕಾಂ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರವು ರೈತರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿದೆ. ರೈತರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಮಳೆ–ಬೆಳೆ ಅಭಾವದಿಂದ ರೈತರ ಬದುಕು ಬೀದಿಗೆ ಬಿದ್ದಿದೆ. ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಇರುವ ಬೆಳೆಯನ್ನಾದರೂ ಉಳಿಸಿಕೊಳ್ಳಲು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.
ಹೆಸ್ಕಾಂ ಶಿರಸಿ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ನಾಗರಾಜ ಪಾಟೀಲ್ ಮನವಿ ಸ್ವೀಕರಿಸಿ ಮಾತನಾಡಿ, ಬನವಾಸಿಯಲ್ಲಿ ಉಪ ವಿದ್ಯುತ್ ಸರಬರಾಜು ಕೇಂದ್ರ ಆರಂಭಗೊಂಡಲ್ಲಿ ಈ ಸಮಸ್ಯೆ ಬಗೆಹರಿಯಲಿದೆ. ಸಿಬ್ಬಂದಿ ಕೊರತೆ ಎದುರಿಸುತ್ತಿದ್ದರು. ರೈತರಿಗೆ ಅನುಕೂಲವಾಗುವ ಉದ್ದೇಶದಿಂದ 1ಗಂಟೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗಳಿಗೆ ಮನವಿ ಮಾಡಿಕೊಂಡು ದಿನದ 5 ತಾಸು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್ ನಾಯ್ಕ್, ಭಾಶಿ ಗ್ರಾಪಂ ಸದಸ್ಯರಾದ ಗಜಾನನ ಗೌಡ, ವಿನಯ ಗೌಡ, ಬಸವರಾಜ ನಾಯ್ಕ್, ಪ್ರಮುಖರಾದ ರವಿ ನಾಯ್ಕ್ ಕಲಕರಡಿ, ಭರತ್ ಪಿಳ್ಳೈ, ಬಿಜೆಪಿ ರೈತ ಮೋರ್ಚಾದ ಪುಟ್ಟರಾಜ ಸವಣೂರು ಸೇರಿದಂತೆ ಸುತ್ತಮುತ್ತಲಿನ ನೂರಾರು ರೈತರು ಪಾಲ್ಗೊಂಡಿದ್ದರು.