Slide
Slide
Slide
previous arrow
next arrow

ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ಲಸಿಕೆ ಹಾಕಿಸಲು ಡಿಸಿ ಸೂಚನೆ

300x250 AD

ಕಾರವಾರ: ಜಿಲ್ಲೆಯ ರೈತರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆಯನ್ನು ತಪ್ಪದೇ ಹಾಕಿಸುವಂತೆ ಹಾಗೂ ಈ ಲಸಿಕಾ ಅಭಿಯಾನದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಅವರು ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ , ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಂಗವಾಗಿ ಹಸುಗಳಿಗೆ ಪೂಜೆ ಸಲ್ಲಿಸಿ, ಅವುಗಳಿಗೆ ಹಿಂಡಿ ತಿನ್ನಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಏಪ್ರಿಲ್ 30ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಯಾವುದೇ ಜಾನುವಾರುಗಳು ಲಸಿಕೆಯಿಂದ ವಂಚಿತರಾಗದಂತೆ ಹಾಗೂ ಜಿಲ್ಲೆಯ ರೈತರು, ಜಾನುವಾರು ಸಾಕಾಣಿಕೆದಾರರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸುವಂತೆ ಹೇಳಿದರು.
ಕಾಲುಬಾಯಿ ಜ್ವರದಿಂದ, ರೈತರಿಗೆ ಆರ್ಥಿಕ ನಷ್ಟ ಉಂಟಾಗಲಿದ್ದು, ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಹಾಗೂ ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆಗಳಿದ್ದು, ಆ ನಿಟ್ಟಿನಲ್ಲಿ ರೋಗದಿಂದ ಸಂಪೂರ್ಣ ಸುರಕ್ಷತೆಗಾಗಿ ತಮ್ಮ 4-5 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗವನ್ನು ಪಡೆಯಬೇಕು ಎಂದರು.
ಜಿಲ್ಲೆಯ ಎಲ್ಲಾ 1289 ಗ್ರಾಮಗಳಲ್ಲಿ ಪಶು ಪಾಲನಾ ಇಲಾಖೆಯಿಂದ ಲಸಿಕೆಯನ್ನು ನೀಡಲು ಬಂದ ಲಸಿಕೆದಾರರಿಗೆ ರೈತರು ಅಗತ್ಯ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕಾರ ನೀಡುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಬೇಕಾದಷ್ಟು ಕಾಲುಬಾಯಿ ಲಸಿಕೆ ದಾಸ್ತಾನಿದ್ದು, ಪತ್ರಿ 50-80 ಜಾನುವಾರುಗಳಿಗೆ ಒಂದು ಬ್ಲಾಕ್‌ನಂತೆ ಒಟ್ಟು 4957 ಬ್ಲಾಕ್‌ಗಳನ್ನು ರಚಿಸಲಾಗಿದ್ದು, 233 ಲಸಿಕೆದಾರರ ಮೂಲಕ ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್ ಮತ್ತು ಬಳಸಲಾಗುತ್ತಿದೆ ಹಾಗೂ ನಾಯಿ ಮತ್ತು ಬೆಕ್ಕುಗಳಿಗೆ ರೇಬೀಸ್ ರೋಗದ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ಕೆ. ಎಮ್. ಮೋಹನಕುಮಾರ ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಕಾಲುಬಾಯಿ ಲಸಿಕೆ ಅಭಿಯಾನ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ-1ಚಂದ್ರಶೇಖರ್, ಪೌರಾಯುಕ್ತ ರವಿಕುಮಾರ್, ಪಶುವೈದ್ಯಾಧಿಕಾರಿ ಡಾ. ಪ್ರಶಾಂತ ಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಎಇಇ ಭಾಸ್ಕರ್ ಗೌಡ ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top