ದಾಂಡೇಲಿ: ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ವಿತರಣೆಗೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ನಗರ ಸಭೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ಜಿ+2 ಆಶ್ರಯ ಮನೆಗಳ ವಿತರಣೆಗೆ ತ್ವರಿತಗತಿಯಲ್ಲಿ ಕ್ರಮವನ್ನು ಕೈಗೊಳ್ಳಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.
ಪ್ರತಿಭಟನಾನಿರತರ ಜೊತೆ ಮಾತನಾಡಿದ ಪೌರಾಯುಕ್ತಾರಾದ ಸಿದ್ದಪ್ಪ ಮಹಾಜನ್ ಜೂನ್ 8ರ ಒಳಗಡೆ 108 ಮನೆಗಳನ್ನು ವಿತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಸಾಧ್ಯವಾದಲ್ಲಿ 192 ಮನೆಗಳನ್ನು ವಿತರಿಸುವ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ 108 ಮನೆಗಳ ನಿರ್ಮಾಣ ಕಾರ್ಯ ಮುಗಿದಿದೆ. ಆದರೆ ಆಶ್ರಯ ಮನೆಗಳ ಪ್ರದೇಶ ವ್ಯಾಪ್ತಿಯಲ್ಲಿ ರಸ್ತೆ, ಬೀದಿ ದೀಪ ಹೀಗೆ ಅಗತ್ಯ ಬೇಕಾದ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಆಶ್ರಯ ಫಲಾನುಭವಿಗಳು ಉಪಸ್ಥಿತರಿದ್ದರು.