Slide
Slide
Slide
previous arrow
next arrow

ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನ: ಗಂಗೂಬಾಯಿ ಮಾನಕರ

300x250 AD

ಕಾರವಾರ: ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಪಾರರ್ದಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನೋಂದಾಯಿತ ನಾಗರಿಕರು ಹಾಗೂ ದಿವ್ಯಾಂಗ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತದಾರರನ್ನು ಜಾಗೃತಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಮಾತನಾಡಿ, ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ತಾವೆಲ್ಲರು ಯಾವುದೇ ಆಮಿಷಗಳಿಗೆ ಒಳಗಾಗದೆ ಜಾಗೃತ ಮತದಾರರಾಗಬೇಕು. ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಕಡ್ಡಾಯ ಮತದಾನದ ಮಹತ್ವವನ್ನು ಮನವರಿಕೆ ಮಾಡಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಸಮಾಜಕ್ಕೆ ಉತ್ತಮರೆನಿಸಬಹುದಾದ ನಾಯಕರನ್ನು ಆರಿಸುವಲ್ಲಿ ಪ್ರಜ್ಞಾವಂತ ಯುವ ಮತದಾರರು ನೆರವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಆವರಣದಿಂದ ಆರಂಭಗೊಂಡ ಜಾಥಾವು ಡಾ.ಪಿಕಳೆ ರಸ್ತೆ, ಸುಭಾಷ್ ಚಂದ್ರ ಬೋಸ್ ವೃತ್ತ, ಸವಿತಾ ಹೋಟೆಲ್ ವೃತ್ತ, ಟಿಎಚ್‌ಒ ಆಫೀಸ್ ಸರ್ಕಲ್ ಮಾರ್ಗವಾಗಿ ಸಾಗಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಂತ್ಯಗೊಂಡಿತು. ಬಳಿಕ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ‘ನಾ ಭಾರತ’ ಚುನಾವಣಾ ಜಾಗೃತಿ ಗೀತೆಯನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top